ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಠಿಣ ಕರ್ಫ್ಯೂ ಜಾರಿಗೆ ಜಿಲ್ಲಾಡಳಿತ ನಿರ್ಧರಿಸಿದೆ.
ನಾಳೆಯಿಂದ ಪ್ರತೀದಿನ ಸಾಯಂಕಾಲ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಸೋಮವಾರ ಸಂಜೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಈ ವಿಷಯವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸುದ್ದಿಗಾರರಿಗೆ ತಿಳಿಸಿದರು.
ಕರ್ಫ್ಯೂ ಜಾರಿಗೊಳ್ಳುವ ಈ ಅವಧಿಯಲ್ಲಿ ಸಾರ್ವಜನಿಕರ ಓಡಾಟ, ಅಂಗಡಿ-ಮುಗ್ಗಟ್ಟು ತೆರೆಯುವುದು ಸೇರಿದಂತೆ ಯಾವುದೇ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಟ್ಟುನಿಟ್ಟಿನ ನಿರ್ಬಂಧ ಇರುತ್ತದೆ ಮತ್ತು ಇದಕ್ಕೆ ಜನರು ಸಹಕಾರ ನೀಡಬೇಕು ಎಂದು ಕಾರಜೋಳ ಅವರು ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಂದು ಐವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಜಿಲ್ಲೆಯ ವೈದ್ಯರೊಬ್ಬರು ಸಾವನ್ನಪ್ಪಿದ್ದು, ಮೃತಪಟ್ಟಿರುವ ಉಳಿದ ಎಲ್ಲ ಸೋಂಕಿತರೂ ಬೇರೆ ಬೇರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಹಾಗೂ ಕಲಾದಗಿಯ ವೈದ್ಯರೊಬ್ಬರು ಮೃತಟ್ಟಿದ್ದು, ಅವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕಾರಜೋಳ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.