Advertisement

ವಿಕಲಚೇತನರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಲು ಶ್ರಮಿಸಿ

03:42 PM Jun 02, 2022 | Team Udayavani |

ಗದಗ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ವಿಕಲಚೇತನರನ್ನು ಗುರುತಿಸಿ ಅವರಿಗೆ ವಿಶಿಷ್ಟ ಗುರುತಿನ ಚೀಟಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಜಿಪಂ ಸಿಇಒ ಡಾ| ಸುಶೀಲಾ ಬಿ. ಹೇಳಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಡೆದ ಅಧಿಕಾರಿಗಳ ಕರ್ತವ್ಯದಲ್ಲಿನ ಬಲವರ್ಧನೆ ಹಾಗೂ ವಿಶಿಷ್ಟ ಗುರುತಿನ ಚೀಟಿ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ವಿಕಲಚೇತನರಿಗೆ ಸಿಗುವಂತಹ ಸೌಲಭ್ಯಗಳು ಹಾಗೂ ಸೌಕರ್ಯಗಳ ಕುರಿತು ವ್ಯಾಪಕ ಅರಿವು ಮೂಡಿಸಬೇಕು. ಮನೆ-ಮನೆಗೆ ಭೇಟಿ ನೀಡಿ ವಿಕಲತೆ ಬಗ್ಗೆ ಕುಟುಂಬದ ಸದಸ್ಯರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳೊಂದಿಗೆ ಸಂಪರ್ಕವಿಟ್ಟುಕೊಂಡು ಅರ್ಹ ವಿಕಲಚೇತನರಿಗೆ ಸಾಧನ ಸಲಕರಣೆ, ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣ ಪತ್ರ ಮತ್ತು ಬಸ್‌ಪಾಸ್‌ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಶಿಬಿರಗಳನ್ನು ಏರ್ಪಡಿಸಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಕುಲಪತಿ ಡಾ| ವಿಷ್ಣುಕಾಂತ ಚಟಪಲ್ಲಿ ಮಾತನಾಡಿ, ನಗರ ಪುನರ್ವಸತಿ ಕಾರ್ಯಕರ್ತರು ತೀವ್ರತರ ಅಂಗವಿಕಲತೆಯಿಂದ ಬಳಲುತ್ತಿರುವ ಅಂಗವಿಕಲ ಮಕ್ಕಳಿಗೆ ಸಮೀಪದ ಆಸ್ಪತ್ರೆಗಳಲ್ಲೇ ವೈದ್ಯಕೀಯ ಚಿಕಿತ್ಸೆಗೆ ಅನುಕೂಲವಾಗುವಂತಹ ಸಲಹಾ ಸೇವೆ ಮಾಡುವುದು, ಸೌಲಭ್ಯ ಸೌಕರ್ಯಗಳ ಕುರಿತು ವ್ಯಾಪಕ ಅರಿವು ಮೂಡಿಸಬೇಕು ಎಂದು ಹೇಳಿದರು.

Advertisement

ಹಿರಿಯ ದಿವಾಣಿ ನ್ಯಾಯಾಧೀಶ ಕೆ. ಗುರುಪ್ರಸಾದ್‌ ಅವರು ವಿಕಲಚೇತನರಿಗೆ ಇರುವ ಹಕ್ಕುಗಳು ಮತ್ತು ಕಾಯ್ದೆ ಕುರಿತು ವಿವರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ್‌ ಶೆಟ್ಟಪ್ಪನವರ ಮಾತನಾಡಿದರು. ಉಮಾ ಶಿರೋಳ ಅವರು ವಿಕಲಚೇತನರ ಕಾಯ್ದೆ ಕುರಿತು ವಿವರಿಸಿದರು.

ಸುರೇಂದ್ರ ಪ್ರಸಾದ್‌, ಬಿ.ಡಿ. ತಟ್ಟಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಜಿ.ಎಸ್‌. ಪಲ್ಲೇದ, ಜಿಲ್ಲಾ ಆಸ್ಪತ್ರೆಯ ವಾಕ್‌ ಮತ್ತು ಶ್ರವಣದೋಷ ವಿಭಾಗದ ಅರುಣಕುಮಾರ ಇಂಗಳಿ, ನೇತೃತಜ್ಞ ಡಾ| ಸತೀಶಕುಮಾರ್‌, ಮನೋ ವೈದ್ಯಕೀಯ ವಿಭಾಗದ ವೈದ್ಯರು, ಜಿಪಂ ಮುಖ್ಯಲೆಕ್ಕಾಧಿಕಾರಿ ಪ್ರಶಾಂತ ಜೆ.ಸಿ. ಹಾಜರಿದ್ದರು. ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಕೆ. ಮಹಾಂತೇಶ ಸ್ವಾಗತಿಸಿದರು. ಮಲ್ಲಪ್ಪ ಹೊಸಳ್ಳಿ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next