ಜೇವರ್ಗಿ: ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಜಾರಿಗೆ ಒತ್ತಾಯಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದಿಂದ ಮೇ 20ರಂದು ಜೇವರ್ಗಿಯಲ್ಲಿ ಬೃಹತ್ ಹೋರಾಟ ನಡೆಸಲಾಗುತ್ತಿದೆ ಎಂದು ಎಸ್ಸಿ, ಎಸ್ಟಿ ಮೀಸಲಾತಿ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಶ್ರವಣಕುಮಾರ ಡಿ. ನಾಯಕ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 100 ದಿನಗಳಿಂದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಅವರ ಧರಣಿ ಸತ್ಯಾಗ್ರಹ ಬೆಂಬಲಿಸಿ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಂದ ಪ್ರತಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅದರಂತೆಯೆ ಮೇ 20ರಂದು ಜೇವರ್ಗಿಯಲ್ಲಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಡಾ| ಬಿ.ಆರ್.ಅಂಬೇಡ್ಕರ್ ಸರ್ಕಲ್‌ದಿಂದ ಬಸವೇಶ್ವರ ವೃತ್ತದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಹೆದ್ದಾರಿ ತಡೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯ ಹೆಚ್ಚಿನ ಜನಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಕೋರಿದ್ದಾರೆ. ಮುಖಂಡರಾದ ಸುರೇಶ ಹವಲ್ದಾರ, ರವಿಚಂದ್ರ ಗುತ್ತೇದಾರ, ಭೀಮರಾಯ ನಗನೂರ, ಗುರುರಾಜ ಸೂಲಹಳ್ಳಿ, ದೌಲಪ್ಪ ಮದನ, ತುಳಜಾರಾಮ ರಾಠೊಡ, ವಿಶ್ವ ಮದಕರಿ ಇತರರು ಇದ್ದರು.