Advertisement
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಕೆಯನ್ನು ಕಡ್ಡಾಯಗೊಳಿಸಿರುವುದು ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಂದಾಗಿ ಶೇ.40ರಷ್ಟು ಅರ್ಹ ಬಡ ಮಕ್ಕಳು ವಿದ್ಯಾರ್ಥಿ ವೇತನದಿಂದ ವಂಚಿತರಾಗುವ ಆತಂಕ ಮೂಡಿದೆ. ಇಡೀ ಯೋಜನೆಗೆ ಒಗ್ಗಿಕೊಳ್ಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
Related Articles
Advertisement
ಆದರೆ ಈ ರೀತಿಯ ಬಹುಪಾಲು ಮಕ್ಕಳ ಪೋಷಕರ ಬಳಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಇಲ್ಲ. ಈ ಕಾರಣದಿಂದಾಗಿ ಸುಧಾರಿತ “ಸ್ಕಾಲರ್‌ಶಿಪ್ ಪೋರ್ಟಲ್’ ಯೋಜನೆ ಜಾರಿ ಕಗ್ಗಂಟಾಗಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಶೇ.60 ಗುರಿಯೂ ಅಸಾಧ್ಯ: ಕಳೆದ ಬಾರಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಶೇ.75ರಷ್ಟು ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿತ್ತು. ಈ ಬಾರಿ ಅಷ್ಟು ಪ್ರಮಾಣದಲ್ಲೂ ವಿದ್ಯಾರ್ಥಿ ವೇತನ ನೀಡುವ ಲಕ್ಷಣ ಕಾಣುತ್ತಿಲ್ಲ. ಅ.31 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಇದೇ ಪ್ರಮಾಣದಲ್ಲಿ ಅರ್ಜಿ ಸಲ್ಲಿಕೆಯಾದರೆ ಶೇ.60ರಷ್ಟು ಗುರಿ ತಲುಪುವುದೂ ಕಷ್ಟಸಾಧ್ಯ ಎಂದು ತಿಳಿಸಿದ್ದಾರೆ.
ಶಿಕ್ಷಕರ ನೆರವು ವ್ಯರ್ಥ: ಆನ್‌ಲೈನ್ ಅರ್ಜಿ ಸಲ್ಲಿಕೆ ವ್ಯವಸ್ಥೆ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಗೊಂದಲವಿದೆ. ಇದೇ ಮೊದಲ ಬಾರಿಗೆ ಈ ಸುಧಾರಿತ ವ್ಯವಸ್ಥೆಯನ್ನು ಪರಿಚಯಿಸಿದ್ದು, ಅರ್ಜಿ ಸಲ್ಲಿಕೆ ಸಂಬಂಧ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶಿಕ್ಷಕರು ನೆರವಾಗುತ್ತಿದ್ದಾರೆ. ಆದರೆ, ಸರ್ವರ್‌ನಲ್ಲಿ ಕಂಡುಬಂರುತ್ತಿರುವ ನೆಟ್‌ವರ್ಕ್ ಅಥವಾ ತಾಂತ್ರಿಕ ಸಮಸ್ಯೆಯಿಂದಾಗಿ ಶಿಕ್ಷಕರ ಶ್ರಮ ವ್ಯರ್ಥವಾಗುತ್ತಿದೆ ಎಂಬ ಆರೋಪ ಶಿಕ್ಷಕರ ವಲಯದಿಂದ ಕೇಳಿಬಂದಿದೆ.
ಬ್ಯಾಂಕ್‌ಗಳಿಂದ ಸಿಗದ ಸಹಕಾರ: ಅನೇಕಲ್ ತಾಲೂಕಿನ ವ್ಯಾಪ್ತಿಯಲ್ಲಿ ಕೆಲವು ಬ್ಯಾಂಕ್‌ಗಳು ವಿದ್ಯಾರ್ಥಿಗಳಿಗೆ ಶೂನ್ಯ ಠೇವಣಿ (ಜೀರೋ ಬ್ಯಾಲೆನ್ಸ್) ಖಾತೆ ತೆರೆಯಲು ಆಸಕ್ತಿ ತೋರುತ್ತಿಲ್ಲ. ಇದು ಕೂಡ ಯೋಜನೆ ಜಾರಿ ವಿಳಂಬಕ್ಕೆ ಕಾರಣವಾಗಿದೆ.
ಬೆಂಗಳೂರು ನಗರ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗಳು ಈ ಹಿಂದೆ ಜಿಲ್ಲಾ ಬ್ಯಾಂಕ್ ಅಧಿಕಾರಿಗಳ ಸಭೆಯಲ್ಲಿ ಈ ಸಮಸ್ಯೆಯನ್ನು ಲೀಡ್ ಬ್ಯಾಂಕ್ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. ಅಲ್ಲದೇ ಬಡ ವಿದ್ಯಾರ್ಥಿಗಳಿಗೆ ನೆರವಾಗುವಂತೆ ಮನವಿ ಮಾಡಿದ್ದರು. ಲೀಡ್ ಬ್ಯಾಂಕ್‌ನ ಲೀಡ್ ಮುಖ್ಯಸ್ಥರು ಕೂಡ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎನ್ನಲಾಗಿದೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಣೆ ಪ್ರಕ್ರಿಯೆ ವಿಳಂಬದಿಂದ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು, ಇದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅಗತ್ಯ ಪ್ರಮಾಣ ಪತ್ರಗಳನ್ನು ತ್ವರಿತವಾಗಿ ವಿತರಿಸುವಂತೆ ಡಿಸಿ ಸೂಚಿಸಿದ್ದಾರೆ. ಎಲ್ಲ ಅರ್ಹ ವಿದ್ಯಾರ್ಥಿಗಳು ಸಕಾಲದಲ್ಲಿ ಅರ್ಜಿ ಸಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.-ಎಂ.ಎಸ್.ಅರ್ಚನಾ, ಬೆಂಗಳೂರು ನಗರ ಜಿ.ಪಂ ಸಿಇಒ * ದೇವೇಶ ಸೂರಗುಪ್ಪ