ಔರಾದ: ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳು ಕಲ್ಪಿಸಿಕೊಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕಾರ ಮಾಡಿ ಶುಕ್ರವಾರ ಶಾಲೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶೌಚಾಲಯ ಇಲ್ಲದೆ ಇಲ್ಲಿನ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಬಯಲಿನಲ್ಲಿಯೇ ಮೂತ್ರ ವಿಸರ್ಜನೆ ಮಾಡುವಂತಹ ಅನಿವಾರ್ಯತೆ ಬಂದಿದೆ. ಶಾಲೆಯಲ್ಲಿದ್ದ ಶೌಚಾಲಯ ಹಾಳು ಕುಂಪೆಯಾಗಿವೆ. ಸರಿಯಾದ ನಿರ್ವಹಣೆ ಇಲ್ಲದೆ ನೀರು ಸೇರಿದಂತೆ ಬಾಗಿಲು ಇಲ್ಲದೆ ಶೌಚಾಲಯಗಳು ನರಳುತ್ತಿವೆ ಎಂದು ಶಾಲೆಯ ಮುಖ್ಯಶಿಕ್ಷಕರಿಗೆ ಹಲವು ಬಾರಿ ತಿಳಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಇಂದು ಸ್ವಂತ ನಾವೇ ತರಗತಿ ಬಹಿಷ್ಕಾರ ಮಾಡಿ ಪ್ರತಿಭಟನೆ ನಡೆಸುತ್ತಿದ್ದೇವೆಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
9ನೇ ತರಗತಿಯಲ್ಲಿ 120 ವಿದ್ಯಾರ್ಥಿಗಳ ಸಂಖ್ಯೆಯಿದೆ. ಒಂದೇ ಒಂದು ಕೋಣೆಯಲ್ಲಿ ಕುಳಿತುಕೊಂಡು ವಿದ್ಯಾಭ್ಯಾಸ ಮಾಡಲು ನಮ್ಮೆಲ್ಲರಿಗೂ ಪ್ರತಿದಿನವು ಸಮಸ್ಯೆಯಾಗುತ್ತಿದೆ. ಸರ್ಕಾರ ಪ್ರತಿಯೊಂದು ಮಗು ಕಡ್ಡಾಯವಾಗಿ ಶಿಕ್ಷಣವನ್ನು ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸುತ್ತಿದೆ. ಆದರೆ, ಇಲ್ಲಿನ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೇಕಾಗುವ ಅಗತ್ಯ ಸೌಕರ್ಯಗಳು ಕಲ್ಪಿಸಿಕೊಡಲು ವಿಫಲರಾಗಿದ್ದಾರೆಂದು ಕಳವಳ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿರುವ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಎಬಿವಿಪಿ ಜಿಲ್ಲಾ ಸಂಚಾಲಕ ಅಶೋಕ ಶೆಂಬೆಳ್ಳೆ, ಅಂಬದಾನ ನೆಳಗೆ ಸೇರಿದಂತೆ ಇನ್ನಿತರರು, ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆಯಲ್ಲಿ ನಿರತರಾಗಿ ಶಿಕ್ಷಣಾಧಿ ಕಾರಿಗಳು ಸ್ಥಳಕ್ಕೆ ಬರುವ ತನಕ ಪ್ರತಿಭಟನೆ ಹಿಂದೆ ಪಡೆಯುದಿಲ್ಲವೆಂದು ಪಟ್ಟು ಹಿಡಿದರು.
ಬಿಇಒ ಅಭಯ: ಶಾಲೆಯ ವಿದ್ಯಾರ್ಥಿಗಳಿಗೆ ಬೇಕಾಗುವ ಎಲ್ಲ ರೀತಿಯ ಸೌಕರ್ಯವನ್ನು ಎರಡು ದಿನಗಳಲ್ಲಿ ಮಾಡಿಕೋಡುತ್ತೇನೆ. ಅದಲ್ಲದೆ ವಿದ್ಯಾರ್ಥಿಗಳಿಗೆ ಇಷ್ಟೊಂದು ಸಮಸ್ಯೆ ಇದ್ದರೂ ಸ್ಪಂದನೆ ಮಾಡದೆ ಇರುವ ಶಾಲೆಯ ಮುಖ್ಯಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಬಿಇಒ ಎಚ್.ಎಸ್ ನಗನೂರ ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆದು ವಿದ್ಯಾರ್ಥಿಗಳು ಶಾಲೆಯಲ್ಲಿನ ಕೋಣೆಗೆ ತೆರಳಿದರು.