ನವದೆಹಲಿ: ನಾಳೆ ಎಲ್ಲರು ಒಟ್ಟಿಗೆ ಕುಳಿತು ಕಲಿಯಬೇಕು, ಪ್ರಚೋದನೆ, ಶಾಂತಿಭಂಗ ಮಾಡದೇ ತಾಳ್ಮೆಯಿಂದ ಇರುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮಂಗಳವಾರ (ಫೆ.08) ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಹಿಜಾಬ್- ಕೇಸರಿ ವಿವಾದ: ಶಾಲೆ- ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿದ ಸರ್ಕಾರ
ನವದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದು ಮಕ್ಕಳ ಭವಿಷ್ಯದ ಪ್ರಶ್ನೆ. ಹೈಕೋರ್ಟ್ ತೀರ್ಪು ಬರುವವರೆಗೆ ಎಲ್ಲರೂ ತಾಳ್ಮೆಯಿಂದ ಇರಿ ಎಂದು ಮನವಿ ಮಾಡಿದ್ದಾರೆ.
ವಿದ್ಯಾರ್ಥಿ ನಾಯಕರಾಗಲಿ, ಪ್ರತಿಪಕ್ಷದವರಾಗಲಿ, ಆಡಳಿತ ಪಕ್ಷದವರಾಗಲಿ ಯಾರನ್ನೂ ಪ್ರಚೋದನೆ ಮಾಡುವ ಹೇಳಿಕೆ ನೀಡಬಾರದು. ಸಂವಿಧಾನ ಹಾಗೂ ಕಾನೂನಿನ ಪ್ರಕಾರ ಎಲ್ಲವೂ ನಡೆಯುತ್ತದೆ. ಗಲಾಟೆ ನಡೆದ ಜಿಲ್ಲೆಯಲ್ಲಿ ಈಗಾಗಲೇ ರಜೆ ಘೋಷಿಸಲಾಗಿದ್ದು, ನಾಳೆಯೂ ರಜೆ ನೀಡಲಾಗುವುದು ಎಂದು ತಿಳಿಸಿದ್ದರು.
ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಅರ್ಥಹೀನ. ಇದರಲ್ಲಿ ನಮ್ಮ ವಿದ್ಯಾರ್ಥಿಗಳ ಭವಿಷ್ಯ ಅಡಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಈ ಬಗ್ಗೆ ವರಿಷ್ಠರ ಜತೆ ಯಾವುದೇ ಚರ್ಚೆ ನಡೆಸಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಸರಕಾರ ಬದ್ಧವಾಗಿದೆ ಎಂದು ಹೇಳಿದರು.
ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಪ್ರಕರಣದ ಕುರಿತಂತೆ ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಬುಧವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ. ಏತನ್ಮಧ್ಯೆ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಿಸಿದೆ.