ಎಚ್.ಡಿ.ಕೋಟೆ: ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಂದು ಕೆಲಸಕ್ಕೂ ಕಂಪ್ಯೂಟರ್ ಅವಶ್ಯವಿದ್ದು ಪ್ರತಿಯೊಬ್ಬರೂ ಕಡ್ಡಾಯವಾಗಿ ಕಂಪ್ಯೂಟರ್ ತರಬೇತಿ ಪಡೆದುಕೊಳ್ಳಬೇಕಿದೆ ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಚಂದ್ರಪ್ಪ ಹೇಳಿದರು.
ಪಟ್ಟಣದ ಕಸ್ತೂರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಸರ್ವಚೇತನ ಟ್ರಸ್ಟ್ ಆದಿವಾಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ ಕಂಪ್ಯೂಟರ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿ ಜೀವನದ ಪ್ರಾರಂಭಿಕ ಹಂತದಿಂದಲೇ ಕಂಪ್ಯೂಟರ್ ಜ್ಞಾನ ಪಡೆದುಕೊಳ್ಳುವುದರಿಂದ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವುದರ ಜೊತೆಗೆ ಖಾಸಗಿ ಕ್ಷೇತ್ರದಲ್ಲೂ ಉದ್ಯೋಗ ಪಡೆಯಲು ಅನುಕೂಲವಾಗಲಿದೆ. ಇದರಿಂದ ಸ್ವಯಂ ಉದ್ಯೋಗವೂ ಮಾಡಬಹುದೆಂದು ಹೇಳಿದರು.
ಸವ್ವೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಟ್ಟಮ್ಮ ಮಾತನಾಡಿ, ಇಂದು ವಿದ್ಯಾರ್ಥಿಗಳು ಕಂಪ್ಯೂಟರ್ ಕಲಿಯದಿದ್ದರೆ ಆತನ ವಿದ್ಯಾಭ್ಯಾಸ ಪೂರ್ಣಗೊಂಡಿಲ್ಲವೆಂದೇ ಅರ್ಥ. ಬ್ಯಾಂಕ್, ಕಚೇರಿ, ಮುದ್ರಣ ಮಾಧ್ಯಮ, ಡಿಜಿಟಲ್ ಮಾಧ್ಯಮ ಸೇರಿದಂತೆ ಎಲ್ಲೆ ಕ್ಷೇತ್ರಗಳಲ್ಲಿಯೂ ಕಂಪ್ಯೂಟರ್ ಬಳಕೆ ಅನಿವಾರ್ಯವಾಗಿದೆ ಎಂದು ಹೇಳಿದರು.
ಕಸ್ತೂರಿ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಸತೀಶ್ ಆರಾಧ್ಯ, ಆದಿವಾಸಿ ಮುಖಂಡ ಶೈಲೇಂದ್ರ, ಬಿ.ಸಿದ್ದರಾಜು, ಜಯರಾಜು, ಕಸ್ತೂರಿ ಮಹೇಶ್, ಮಹದೇವು ಇನ್ನಿತರರಿದ್ದರು.