ಕಲಬುರಗಿ: ಉನ್ನತ ಶಿಕ್ಷಣ, ಐಟಿಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ, ಉಪಮುಖ್ಯಮಂತ್ರಿ ಡಾ| ಅಶ್ವತ್ಥನಾರಾಯಣ ಅವರ ಮುಂದೆ ಸೋಮವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶೌಚಾಲಯ ಸಮಸ್ಯೆಗೆ ಹೇಳಿಕೊಂಡ ಪ್ರಸಂಗ ನಡೆಯಿತು.
ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ನಂತರ ಡಿಸಿಎಂ ಡಾ| ಅಶ್ವತ್ಥನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ತೆರಳಿ ಮೂರು ಹೊಸ ಕೊಠಡಿ ಉದ್ಘಾಟಿಸಿದರು. ನಂತರದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಂವಾದ ವೇಳೆ ವಿದ್ಯಾರ್ಥಿಗಳು ಕಾಲೇಜಿನ ವಿವಿಧ ಸಮಸ್ಯೆಗಳನ್ನು ಬಿಚ್ಚಿಟ್ಟರು. ವಿದ್ಯಾರ್ಥಿನಿಯೊಬ್ಬಳು ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಹಾಗೂ ಶೌಚಾಲಯದ ಸಾಕಷ್ಟು ಸಮಸ್ಯೆ ಇದೆ. ಆದಷ್ಟು ಬೇಗ ಸಮಸ್ಯೆ ಪರಿಹರಿಸುವಂತೆ ಡಿಸಿಎಂ ಬಳಿ ಮನವಿ ಮಾಡಿದರು.
ಪ್ರಾಚಾರ್ಯ ಡಾ| ನಂದಗಿ ರಾಚಪ್ಪ ಮಾತನಾಡಿ, ಕೊಠಡಿಗಳ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಳಂಬ ಮಾಡಲಾಗಿದೆ. ಇತ್ತೀಚೆಗೆ ಕಟ್ಟಡವನ್ನು ಕಾಲೇಜಿನ ಆಡಳಿತ ಮಂಡಳಿಗೆ ಹಸ್ತಾಂತರಿಸಿದ್ದು, ಶೌಚಾಲಯದ ಕೊಠಡಿಗಳ ನಿರ್ಮಾಣ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಿದೆ ಎಂದು ಸಮಜಾಯಿಸಿ ನೀಡಿದರು. ಇದಕ್ಕೆ ತೃಪ್ತರಾಗದ ಡಿಸಿಎಂ ಅಶ್ವತ್ಥನಾರಾಯಣ, ಹೆಣ್ಣು ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಿಲ್ಲ ಎಂದರೆ ಏನು?. ಕಾಲೇಜಿಗೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಬೇಕು. 15 ದಿನದೊಳಗೆ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಕಟ್ಟಡ ಕಾಮಗಾರಿ ಗುತ್ತಿಗೆದಾರರನ್ನು ಕರೆಸಿ, ತ್ವರಿತವಾಗಿ ಸಮಸ್ಯೆ ಬಗೆ ಹರಿಸಬೇಕು. ಹಾಗೆಯೇ ಸಿಸಿ ರಸ್ತೆಯನ್ನು ನಿರ್ಮಿಸಬೇಕೆಂದು ಪ್ರಾಂಶುಪಾಲರಿಗೆ ತಾಕೀತು ಮಾಡಿದರು. ಈ ಕುರಿತು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು ಸಹ ಕ್ರಮವಹಿಸಬೇಕು. ಅಲ್ಲದೇ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಜವಾಬ್ದಾರಿ ವಹಿಸಬೇಕೆಂದು ಸಲಹೆ ನೀಡಿದರು.
ಉದ್ಯೋಗ ಮಾಹಿತಿ: ವಿದ್ಯಾಭ್ಯಾಸದ ನಂತರ ಯುವಕರಿಗೆ ಉದ್ಯೋಗ ಮಾಹಿತಿ ನೀಡಲು ಪ್ರೌಢಶಾಲಾ ಮಟ್ಟದಲ್ಲೇ “ಯೂತ್ ಎಂಪವರ್‌ವೆುಂಟ್ ಪ್ಲಾಟ್‌ಫಾರಂ’ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಡಿಸಿಎಂ ಡಾ| ಅಶ್ವತ್ಥನಾರಾಯಣ ತಿಳಿಸಿದರು. ಪ್ರತಿ ಪ್ರೌಢಶಾಲೆಯಲ್ಲೂ ಒಬ್ಬ ನುರಿತ ಶಿಕ್ಷಕರನ್ನು ನೇಮಿಸುವ ಮೂಲಕ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ, ಕೌಶಲ, ಕೌನ್ಸಿಲಿಂಗ್ ಹಾಗೂ ಉದ್ಯೋಗಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುತ್ತದೆ. ಇದಲ್ಲದೇ, ಶಿಷ್ಯವೇತನ, ವಿವಿಧ ನಿಗಮಗಳಿಂದ ಸಿಗುವ ಸಾಲ ಸೌಲಭ್ಯ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಒದಲಾಗಿಸಲಾಗುವುದು ಎಂದು ಮಾಹಿತಿ ನೀಡಿದರು.