Advertisement

ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಅಗತ್ಯ

09:23 PM Jul 20, 2019 | Lakshmi GovindaRaj |

ದೊಡ್ಡಬಳ್ಳಾಪುರ: ವಿದ್ಯಾರ್ಥಿ ಜೀವನದಲ್ಲಿ ಪದವಿಪೂರ್ವ ಶಿಕ್ಷಣ ಮಹತ್ವದ ಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದರೆ, ಉತ್ತಮ ಸಾಧಕರಾಗುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎನ್‌.ನಾಗವೇಣಿ ತಿಳಿಸಿದರು.

Advertisement

ತಾಲೂಕಿನ ದೊಡ್ಡಬೆಳವಂಗಲ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪಠ್ಯೇತರಗಳಿಗೂ ಪ್ರಾಮುಖ್ಯತೆ ಇರಲಿ: ನಮ್ಮ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರತಿ ವರ್ಷ ಉತ್ತಮ ಫಲಿತಾಂಶ ಬರುತ್ತಿದೆ. ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಗೊಳಿಸಲು ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಶ್ರಮಿಸಬೇಕು. ಪಠ್ಯ ವಿಷಯಗಳಿಗೆ ನೀಡುವ ಪ್ರಾಮುಖ್ಯತೆಯನ್ನು ಪಠ್ಯೇತರಗಳಿಗೂ ನೀಡಬೇಕು.

ಗ್ರಾಮೀಣ ವಿದ್ಯಾರ್ಥಿಗಳನ್ನು ಮುಖ್ಯವಾಹಿನಿಗೆ ತರುವುದು ಕರ್ತವ್ಯವಾಗಬೇಕು. ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ ಭವಿಷ್ಯ ರೂಪಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತು ಆಸಕ್ತಿ ಮೂಡಿಸಬೇಕಾಗಿದೆ. ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಬೇಕು. ವಿದ್ಯಾರ್ಥಿಗಳಿಗೆ ಉಪನ್ಯಾಸಕರು ಪ್ರೊತ್ಸಾಹಿಸಿದಾಗ ಮಾತ್ರ ಉತ್ತಮ ಫಲಿತಾಂಶ ಬರುತ್ತದೆ ಎಂದರು.

ವಿದ್ಯಾರ್ಥಿಗಳನ್ನು ಸಾಧಕರನ್ನಾಗಿಸಿ: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಚ್‌.ಬಿ.ಪ್ರಕಾಶ್‌ ಮಾತನಾಡಿ, ಜ್ಞಾನ ಮತ್ತು ಭಾವ ಮಧುರವಾಗಿದ್ದರೆ ಬದುಕು ಸುಂದರವಾಗುತ್ತದೆ. ಜೀವನ ಪರಿಶುದ್ಧ ಭಾವನೆಯ ಮೇಲಿದೆ. ವಿದ್ಯಾರ್ಥಿಗಳನ್ನು ಸಾಧಕರನ್ನಾಗಿ ಮಾಡುವ ಉದ್ದೇಶ ನಮ್ಮದಾಗಿರಬೇಕು.

Advertisement

ಅಂತಹ ಉದ್ದೇಶದೊಂದಿಗೆ ಆತ್ಮಸಾಕ್ಷಿಯ ಕರ್ತವ್ಯ ಸೇರಿಕೊಂಡರೆ ವಿದ್ಯಾರ್ಥಿಗಳ ಗುರಿ ಸುಗುಮವಾಗುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಪ್ರತಿ ವರ್ಷ ವಿನೂತನ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಕಾಲೇಜು ಹಂತದಿಂದ ರಾಜ್ಯ ಮಟ್ಟದ ತನಕ ಕ್ರೀಡಾ, ಸಾಂಸ್ಕೃತಿಕ, ಯುವ ಸಂಸತ್‌ ಮುಂತಾದ ಸ್ಪರ್ಧಾ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆ ಕಲ್ಪಿಸಿದೆ ಎಂದರು.

ದೊಡ್ಡಬೆಳವಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್‌.ಅಡವೀಶ್‌ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳಾದ ನಾರಾಯಣಪ್ಪ, ರಾಮಕೃಷ್ಣಯ್ಯ, ರಮೇಶ್‌, ಸುರೇಶ್‌, ಡಿ.ಎನ್‌. ಬಾಬು, ಕೋದಂಡ ರಾಮಯ್ಯ, ವೇಣುಗೋಪಾಲ್‌, ಚಂದ್ರಕಲಾ ಹಾಜರಿದ್ದರು. ನಿವೃತ್ತ ಪ್ರಾಂಶುಪಾಲರಾದ ಜಿ.ರಾಮಚಂದ್ರ ಅವರನ್ನು ಪ್ರಾಂಶುಪಾಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ ತಾಲೂಕಿನ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next