Advertisement

ಬಸ್‌ ಪಾಸ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

09:16 PM Oct 23, 2021 | Team Udayavani |

ಬಾಗಲಕೋಟೆ: ರಾಜ್ಯಾದ್ಯಂತ ಶಾಲಾ-ಕಾಲೇಜು ಆರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಪ್ರತಿಭಟನಾ ಮೆರವಣಿಗೆ ಮೂಲಕ ನವನಗರದ ಜಿಲ್ಲಾಡಳಿತ ಭವನದವರೆಗೆ ಪಾದಯಾತ್ರೆ ಮೂಲಕ ತೆರಳಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Advertisement

ಎಬಿವಿಪಿ ರಾಜ್ಯ ಹಾಸ್ಟೆಲ್‌ ಪ್ರಮುಖರಾದ ಪ್ರಕಾಶ ಪೂಜಾರ ಮಾತನಾಡಿ, ಕೊರೊನಾ ಎರಡನೇ ಅಲೆಗೆ ತತ್ತರಿಸಿದ ಕರ್ನಾಟಕ ಹಂತ ಹಂತವಾಗಿ ಸಹಜ ಸ್ಥಿತಿಗೆ ಮರಳಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳೆಲ್ಲವೂ ಪ್ರಾರಂಭವಾಗಿ ವಿದ್ಯಾರ್ಥಿಗಳೆಲ್ಲ ಉತ್ಸಾಹದಿಂದ ಶಾಲಾ-ಕಾಲೇಜಿಗೆ ಬರುತ್ತಿದ್ದಾರೆ. ಆದರೆ ಭೌತಿಕ ತರಗತಿಗಳು ಆರಂಭಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಕೆಲವೊಂದು ಸಮಸ್ಯೆ ಉದ್ಭವಿಸುತ್ತಿವೆ ಎಂದು ಹೇಳಿದರು.

ಶಾಲಾ-ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯತ್ತ ಉತ್ಸಾಹದಿಂದ ಗಮನ ಹರಿಸುತ್ತಿದ್ದಾರೆ. ಕೋವಿಡ್‌ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಲಾಕ್‌ಡೌನ್‌ ಕಾರಣಕ್ಕೆ ಸ್ಥಗಿತಗೊಂಡ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಆರಂಭವಾಗಿಲ್ಲ. ಇದರಿಂದಾಗಿ ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರ ತೊಂದರೆಯಾಗಿದೆ.

ಸಾರಿಗೆ ಸಂಸ್ಥೆ ತಕ್ಷಣವೇ ವಿದ್ಯಾರ್ಥಿಗಳ ಅವಶ್ಯಕತೆಗೆ ಅನುಗುಣವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್‌ ಸಂಚಾರ ಆರಂಭಿಸಬೇಕು. ವಿದ್ಯಾರ್ಥಿಗಳು ಬಸ್‌ ಪಾಸ್‌ ಪಡೆಯಲು ಅರ್ಜಿ ಸಲ್ಲಿಸಿದ್ದರೂ, ಸಿಬ್ಬಂದಿ ಕೊರತೆಯಿಂದಾಗಿ ತಡವಾಗಿ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ದೊರೆಯುತ್ತಿದೆ. ಈ ಸಮಸ್ಯೆ ಸರಿಪಡಿಸಲು ವಿದ್ಯಾರ್ಥಿಗಳಿಗೆ ತಕ್ಷಣವೇ ಬಸ್‌ ಪಾಸ್‌ ನೀಡುವಂತೆ ಆಗ್ರಹಿಸಿದರು.

ಡಿಪ್ಲೊಮಾ, ಎಂಜಿನಿಯರಿಂಗ್‌, ಸ್ನಾತಕ, ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೇ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲ  ವಿದ್ಯಾರ್ಥಿವೇತನ  ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

Advertisement

ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‌ ಅವಲಂಬಿತರಾಗಿದ್ದಾರೆ. ಹೊಸದಾಗಿ ಶಾಲಾ-ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ತರಗತಿಗಳು ಆರಂಭವಾಗಿವೆ. ಆದರೂ ವಿದ್ಯಾರ್ಥಿಗಳ ವಸತಿನಿಲಯಗಳ ಆಯ್ಕೆ ಪ್ರಕ್ರಿಯೆ ಮುಗಿಯದೇ ದಿನನಿತ್ಯ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರವು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ವಸತಿನಿಲಯಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕು. ರಾಜ್ಯದ ಹಿಂದುಳಿದ ವರ್ಗ ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಸಂಖ್ಯೆಗೆ ಮತ್ತು ವಸತಿ ನಿಲಯಗಳಿಗೆ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆ ತುಂಬ ಅಂತರವಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ತಕ್ಷಣಕ್ಕೆ ವಸತಿ ನಿಲಯಗಳ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಈ ವೇಳೆ ಎಬಿವಿವಿ ಬಾಗಲಕೋಟೆ ಜಿಲ್ಲಾ ಸಹ ಸಂಚಾಲಕ ಉನ್ನತ ಬೇವಿನಕಟ್ಟಿ, ಕಾರ್ಯಕರ್ತರಾದ ಶ್ರೇಯಸ್‌ ಶೆಟ್ಟಿ, ನಿಖೀಲ್‌ ಹೆಬ್ಟಾಳ್‌, ಧೀರಜ್‌ ವರ್ನೆಕರ್‌, ಜ್ಯೋತಿ ಸಜ್ಜನ್‌, ಓಂಕಾರ್‌ ಪೀಪಲ್‌, ಚೆನ್ನಪ್ಪ ಈಜೇರಿ, ಅಭಿಷೇಕ್‌ ಓತಗೇರಿ, ಸ್ವಸ್ತಿಕ್‌ ಶೆಟ್ಟಿ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next