ಮೊಳಕಾಲ್ಮೂರು: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯಲ್ಲಿಯೇ ಅಗ್ರಸ್ಥಾನ ಪಡೆಯಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ರವಿಶಂಕರ ರೆಡ್ಡಿ ಹೇಳಿದರು.
ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ಬಾಲಕಿಯರ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಷಯ ಪರಿಣಿತರಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕಲಿಕೆಯಲ್ಲಿ ಸಂಪೂರ್ಣ ತೊಡಗಿಸಿಕೊಂಡು ಉನ್ನತ ಹುದ್ದೆಗಳನ್ನು ಪಡೆದು ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು. ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಶೈಕ್ಷಣಿಕ ವ್ಯವಸ್ಥೆ ಹಾಳಾಗಿದೆ. ಆದ್ದರಿಂದ ಮಕ್ಕಳು ಹೆಚ್ಚಿನ ಪರಿಶ್ರಮದಿಂದ ಗುಣಮಟ್ಟದ ಶಿಕ್ಷಣ ಪಡೆದು ಪ್ರಗತಿ ಹೊಂದಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಮೊದಲ ಮೂರು ಸ್ಥಾನ ಪಡೆದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿನಗದು ಬಹುಮಾನ ನೀಡುವುದಾಗಿ ಘೋಷಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದೆ. ವಿದ್ಯಾರ್ಥಿಗಳು ಕಾನ್ಸನ್‌ಟ್ರೇಟ್, ಅಂಡರ್‌ಸ್ಟಾಂಡ್ ಹಾಗೂ ಪ್ರಾಕ್ಟೀಸ್ ಎಂಬ ಸಿಯುಪಿ ಅಕ್ಷರಗಳನ್ನು ಅನುಸರಿಸಿ ಅಭ್ಯಾಸ ಮಾಡಿದಲ್ಲಿ ಉತ್ತಮ ಅಂಕ ಪಡೆಯಬಹುದು. ಕನ್ನಡ ವಿಷಯದಲ್ಲಿ 125 ಅಂಕಗಳಿಗೆ 125 ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಹಾಗೂ ಭಾಷಾ ಶಿಕ್ಷಕರಿಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ವಿಶೇಷ ಬಹುಮಾನ ನೀಡುವುದಾಗಿ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಟಿ. ನಾಗಭೂಷಣ, ಸಿ.ಎಸ್. ವೆಂಕಟೇಶ್ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ವೆಂಕಟೇಶ್ ರಚಿಸಿದ “ಶಿಖರಗಾಮಿ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಡಯಟ್‌ನ ಬಿ. ಶಿವಕುಮಾರ್, ಸಿ.ಎಲ್. ಏಕನಾಥ, ಬಿಆರ್‌ಸಿ ಹನುಮಂತಪ್ಪ, ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲ ಎಚ್. ನಾಗರಾಜ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ವಿ. ಕೃಷ್ಣಮೂರ್ತಿ, ದೈಹಿಕ ಪರಿವೀಕ್ಷಕ ಶಿವಕುಮಾರ್, ಅಕ್ಷರ ದಾಸೋಹದ ಪಾತಲಿಂಗಪ್ಪ, ಇಸಿಒ ಓಂಕಾರಪ್ಪ, ಸಿಆರ್‌ಪಿಗಳಾದ ಪಿ. ಮಂಜುನಾಥ, ಮೋಹನ್, ಕಸಾಪ ತಾಲೂಕು ಅಧ್ಯಕ್ಷ ಜಿಂಕಾ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ ನಾಯಕ, ಬಿ. ಬಡಯ್ಯ, ಕೋಶಾಧ್ಯಕ್ಷ ಎಸ್. ಶ್ರೀರಾಮುಲು, ಮುಖ್ಯ ಶಿಕ್ಷಕರಾದ ವಿಜಯ್‌ಕುಮಾರ್, ನಯೀಮುರ್ ರೆಹಮಾನ್, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.