Advertisement
ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದಡಿ ಅಲ್ಪಸಂಖ್ಯಾತ ವರ್ಗಕ್ಕೆ ಕಲ್ಪಿಸಿರುವ ಸೌಕರ್ಯಗಳ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
Related Articles
Advertisement
ಸಾಲ ನಿಕಾರಕರಿಸದಿರಲು ಸಲಹೆ: ಸ್ವಉದ್ಯೋಗ ಒಳಗೊಂಡಂತೆ ಸರ್ಕಾರದ ಸಹಾಯಧನ ಹಾಗೂ ಬ್ಯಾಂಕ್ ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಿದ ಅಲ್ಪಸಂಖ್ಯಾತ ವರ್ಗಗಳಿಗೆ ಯಾವುದೇ ವಿಳಂಬ ಮತ್ತು ಸಕಾರಣವಿಲ್ಲದೆ ಬ್ಯಾಂಕ್‌ಗಳು ಸಾಲ ನಿಕಾರಕರಿಸಿದ ನಿರ್ದಿಷ್ಟ ಪ್ರಸಂಗವಿದ್ದರೆ ನನ್ನ ಗಮನಕ್ಕೆ ತರಬೇಕು. ಈ ಕುರಿತಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವುದಾಗಿ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಅಧಿಕಾರೇತರ ಸದಸ್ಯರಿಗೆ ಸಲಹೆ ನೀಡಿದರು.
183 ಮನೆಗಳ ನಿರ್ಮಾಣ ಗುರಿ: ವಿವಿಧ ಗ್ರಾಮೀಣ ವಸತಿ ಯೋಜನೆಯಡಿ 183 ಮನೆಗಳ ನಿರ್ಮಾಣ ಗುರಿ ಹೊಂದಲಾಗಿದೆ. ಅಲ್ಪಸಂಖ್ಯಾತ ವರ್ಗದವರು ಹೆಚ್ಚಾಗಿರುವ ಸವಣೂರ ತಾಲೂಕಿಗೆ ಹೆಚ್ಚುವರಿ ಮನೆ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನು ಹೊರತುಪಡಿಸಿ ಅಲ್ಪಸಂಖ್ಯಾತ ವರ್ಗಕ್ಕೆ ಹೆಚ್ಚುವರಿಯಾಗಿ ಮನೆಗಳ ಅವಶ್ಯಕತೆ ಇದ್ದರೆ ವರದಿ ತರಿಸಿ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಲೀಲಾವತಿ ತಿಳಿಸಿದರು. ನಗರ ಮತ್ತು ಗ್ರಾಮೀಣ ಅಲ್ಪಸಂಖ್ಯಾತ ವರ್ಗದವರಿಗೆ ನಿಗದಿತ ಖೋಟಾ ಹೊರತುಪಡಿಸಿ ಸಾಮಾನ್ಯ ವರ್ಗದಲ್ಲೂ ಪರಿಗಣಿಸಬೇಕು. ಅತೀ ಹೆಚ್ಚು ಅಲ್ಪಸಂಖ್ಯಾತರು ವಾಸಿಸುವ ಪ್ರದೇಶದಲ್ಲಿ ಹೆಚ್ಚುವರಿ ಮನೆಗಳ ಮಂಜೂರಾತಿ ಅವಶ್ಯಕತೆ ಇದ್ದರೆ ಸರ್ಕಾರಕ್ಕೆ ವಿಶೇಷ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಿರೀಕ್ಷಿತ ಮಟ್ಟದಲ್ಲಿ ಸಲ್ಲಿಕೆಯಾಗದ ಅರ್ಜಿ:
ಕೃಷಿ ಇಲಾಖೆಯಲ್ಲಿ ಕೃಷಿ ಯಾಂತ್ರಿಕರಣ ಯೋಜನೆ, ಸೂಕ್ಷ್ಮ ನೀರಾವರಿ ಯೋಜನೆ, ನೂತನ ಕೃಷಿ ಉತ್ತೇಜನ ಯೋಜನೆ, ಕೃಷಿ ಭಾಗ್ಯ ಯೋಜನೆಯಡಿ ಅಲ್ಪಸಂಖ್ಯಾತರ ವರ್ಗಗಳಿಗೆ ಜಿಲ್ಲೆಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಶೇ.15 ರಷ್ಟು ಅನುದಾನ ಬಳಕೆಮಾಡಬೇಕು. ಆದರೆ, ಅಲ್ಪಸಂಖ್ಯಾತ ಹಿಡುವಳಿದಾರರ ಸಂಖ್ಯೆ ಕಡಿಮೆ ಇರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಅರ್ಜಿಗಳು ಬರುವುದಿಲ್ಲ ಎಂದು ಕೃಷಿ ಜಂಟಿ ನಿರ್ದೇಶಕರು ಸಭೆಯ ಗಮನಕ್ಕೆ ತಂದರು.
ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಯಡಿ ಅಲ್ಪಸಂಖ್ಯಾತ ವರ್ಗದವರಿಗೆ ಸರ್ಕಾರದ ಸೌಲಭ್ಯಗಳ ಕುರಿತಂತೆ ಹೆಚ್ಚಿನ ಪ್ರಚಾರ ಅಗತ್ಯವಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ, ವಿಡಿಯೋ ಪ್ರದರ್ಶನ, ಪ್ರತಿ ಗ್ರಾಮದಲ್ಲೂ ಮಾಹಿತಿ ನೀಡುವ ಕಾರ್ಯಕ್ರಮ ರೂಪಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
ಮೀನುಗಾರಿಕೆ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ವರ್ಗಕ್ಕೆ ಮೀನುಗಾರಿಕೆಗಾಗಿ ಕೊಳಗಳ ನಿರ್ಮಾಣಕ್ಕೆ ಹಣಕಾಸಿನ ನೆರವು ಹಾಗೂ ನಗರದಲ್ಲಿ ಮೀನು ಮಾರುಕಟ್ಟೆ ನಿರ್ಮಿಸಲು ನಿವೇಶನ ಕುರಿತಂತೆ ಪ್ರಸ್ತಾವನೆಯನ್ನು ತ್ವರಿತವಾಗಿ ವಿಲೇವಾರಿಗೊಳಿಸಲು ಸೂಚನೆ ನೀಡಿದರು.
ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಕುರಿತಂತೆ ಉದ್ಯೋಗ ವಿನಿಮಯ ಕಚೇರಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ಉದ್ಯೋಗ ಮೇಳ ಆಯೋಜಿಸಬೇಕು. ಈ ಕುರಿತಂತೆ ವ್ಯಾಪಕ ಪ್ರಚಾರ ನೀಡುವಂತೆ ಉದ್ಯೋಗ ವಿನಿಮಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಕ್ಪ್ ಆಸ್ತಿಗಳ ಸರ್ವೇ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ವಕ್ಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾನೂನು ಸುವ್ಯವಸ್ಥೆಗೆ ಕ್ರಮ:
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ ಮಾತನಾಡಿ, ಕೋಮು ಸಾಮರಸ್ಯ, ಕಾನೂನು ಸುವ್ಯವಸ್ಥೆಗೆ ಜಿಲ್ಲಾ ಪೊಲೀಸ್ ಇಲಾಖೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.ಸೂಕ್ಷ್ಮ ಸಂದರ್ಭದಲ್ಲಿ ಶಾಂತಿ ಸಭೆ ನಡೆಸಿ ಸಮಸ್ಯೆಗೆ ಸ್ಪಂದಿಸಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನನ್ನನ್ನು ಸಂಪರ್ಕಿಸಿ ಅಥವಾ ಪೊಲೀಸ್ ಸಹಾಯವಾಣಿ 24 ತಾಸು ಕಾರ್ಯನಿರ್ವಹಿಸುತ್ತಿದೆ. ಕರೆ ಮಾಡಿದರೆ ತ್ವರಿತವಾಗಿ ಸ್ಪಂದಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಗೋಪಾಲ ಲಮಾಣಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಆರ್.ವಾಸಣ್ಣ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಬಸಪ್ಪ ಭೋಗಿ, ವಿವಿಧ ಇಲಾಖಾ ಅಧಿಕಾರಿಗಳು, ತಾಪಂ ಇಒ, ಪುರಸಭೆ, ನಗರಸಭೆ, ಪಪಂ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.