ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆಯ ಆವಶ್ಯಕತೆಯಿದೆ. ಈ ಬಗ್ಗೆ ರಾಜ್ಯ ಸರಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಅದನ್ನು ಪರಿಗಣಿಸಿ, ಮುಂದಿನ ಕಾಮಗಾರಿಗೆ ಸಿದ್ಧತೆ ಮಾಡಲಾಗುವುದು ಎಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ ಹೇಳಿದರು.
ಸೋಮವಾರ ಇಲ್ಲಿನ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಕಾಮಗಾರಿ ವೀಕ್ಷಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಅಂದಾಜು 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುತ್ತಿದೆ.
ಈ ಕಾಮಗಾರಿಗೆ ಕೇಂದ್ರ ಸರಕಾರ 120 ಕೋಟಿ ರೂ. ನೀಡಿದ್ದು, ಇನ್ನುಳಿದ 30 ಕೋಟಿಯನ್ನು ರಾಜ್ಯ ಸರಕಾರ ವಿನಿಯೋಗಿಸಲಿದೆ. ಶೇ. 15ರಷ್ಟು ಕಾಮಗಾರಿ ಮುಗಿದಿದ್ದು, ಉಳಿದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಿಮ್ಸ್‌ನಲ್ಲಿ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ಔಷಧಗಳಿಗೆ ರಿಯಾಯಿತಿ: ಜನರ ಆರೋಗ್ಯಕ್ಕೆ ಒತ್ತು ಕೊಡಲಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಶೇ. 50 ರಿಯಾಯಿತಿ ದರದಲ್ಲಿ ಔಷಧಿ ಪೂರೈಕೆ ಮಾಡಲಾಗುತ್ತಿದೆ. ಎಐಐಎಂಎಸ್ ಗೆ ಒಳಪಟ್ಟ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಆರೋಗ್ಯ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನಲ್ಲಿ 47 ಸಾವಿರ ಕೋಟಿ ರೂ. ಮೀಸಲಿಡಲು ಯೋಜಿಸಲಾಗಿದೆ.
ಸರಕಾರಿ ಆಸ್ಪತ್ರೆಗಳ ವೈದ್ಯರು ಕೆಲಸದ ಅವಧಿಯಲ್ಲಿ ಖಾಸಗಿಯಾಗಿ ಪ್ರ್ಯಾಕ್ಟೀಸ್ ಮಾಡುತ್ತಿದ್ದರೆ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದರು. ಇದಕ್ಕೂ ಮುನ್ನ ಸಚಿವರು ಕಿಮ್ಸ್ ಆಸ್ಪತ್ರೆಯ ನಿರ್ದೇಶಕರ ಕಚೇರಿಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ವಿಧಾನಸಭೆ ವಿಪಕ್ಷ ನಾಯಕ ಜಗದೇಶ ಶೆಟ್ಟರ, ಸಂಸದ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಉಪ ಮಹಾಪೌರ ಲಕ್ಷ್ಮೀ ಉಪ್ಪಾರ, ವಿಪ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ಕಿಮ್ಸ್ ನಿರ್ದೇಶಕ ಡಾ| ಡಿ.ಡಿ. ಬಂಟ್, ವೈದ್ಯಕೀಯ ಅಧೀಕ್ಷಕ ಡಾ| ಶಿವಪ್ಪ ಅನುರಶೆಟ್ರಾ, ಪ್ರಾಂಶುಪಾಲ ಡಾ| ಕೆ.ಎಫ್. ಕಮ್ಮಾರ ಮೊದಲಾದವರಿದ್ದರು.