ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2018ರ ಉದ್ಘಾಟಕರಾದ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ, ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಗೆ ಮೈಸೂರು ಜಿಲ್ಲಾಡಳಿತದ ವತಿಯಿಂದ ಬುಧವಾರ ಅಧಿಕೃತ ಆಹ್ವಾನ ನೀಡಲಾಯಿತು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಶಾಸಕರಾದ ಎಚ್.ವಿಶ್ವನಾಥ್, ಎಸ್.ಎ.ರಾಮದಾಸ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ, ಸ್ವಾಗತ ಮತ್ತು ಆಮಂತ್ರಣ ಉಪ ಸಮಿತಿ ಕಾರ್ಯಾಧ್ಯಕ್ಷ ಜಿ.ಎಂ.ರವೀಂದ್ರ, ಸಮಿತಿ ಕಾರ್ಯದರ್ಶಿ ಮಹೇಶ್ ಮತ್ತಿತರರು, ಬೆಂಗಳೂರಿನ ಜಯನಗರದಲ್ಲಿರುವ ಇನ್ಫೋಸಿಸ್ ಪ್ರತಿಷ್ಠಾನದ ಕಚೇರಿಗೆ ತೆರಳಿ, ಡಾ.ಸುಧಾಮೂರ್ತಿ ಅವರಿಗೆ ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ, ರೇಷ್ಮೆ ಹಾರ ಹಾಕಿ, ಫಲ-ತಾಂಬೂಲ ನೀಡಿ ಗೌರವಿಸುವ ಮೂಲಕ ಈ ಬಾರಿಯ ದಸರಾ ಮಹೋತ್ಸವ ಉದ್ಘಾಟಿಸುವಂತೆ ಆಹ್ವಾನ ನೀಡಿದರು.
ಬಳಿಕ, ಗೃಹ ಕಚೇರಿ ಕೃಷ್ಣಾಗೆ ತೆರಳಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಯಿತು. ಈ ವೇಳೆ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡ, ಡಾ.ಸುಧಾಮೂರ್ತಿಯವರು ಅ.10ರಂದು ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಈ ವರ್ಷದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ದಸರಾ ಮಹೋತ್ಸವ ನಾಡ ಹಬ್ಬ. 60 ವರ್ಷಗಳ ಹಿಂದೆ ದಸರಾ ನೋಡಿದ್ದೆ. ಈ ವರ್ಷ ನಾನೇ ದಸರಾ ಉದ್ಘಾಟಿಸುತ್ತಿರುವುದು ನನ್ನ ಸೌಭಾಗ್ಯ.
– ಡಾ.ಸುಧಾಮೂರ್ತಿ, ಅಧ್ಯಕ್ಷರು, ಇನ್ಫೋಸಿಸ್ ಪ್ರತಿಷ್ಠಾನ