ಚಿಕ್ಕಬಳ್ಳಾಪುರ: ಜಿಲ್ಲೆಗೆ ಮಂಜೂರು ಆಗಿರುವ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಆರೋಪಿಸಿ ಚಿಕ್ಕಬಳ್ಳಾಪುರದಲ್ಲಿ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.
ನಿನ್ನೆಯಷ್ಟೆ ಶಿವಕುಮಾರ್ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ವರ್ಗಾವಣೆ ಮಾಡಿರುವುದನ್ನು ಖಂಡಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ವಿಧಾನಸೌಧದಲ್ಲಿ ತಮ್ಮ ಪ್ರಾಣ ಹೋದರೂ ಮೆಡಿಕಲ್ ಕಾಲೇಜು ಬಿಟ್ಟು ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಇದೀಗ ಸುಧಾಕರ್ ಬೆಂಬಲಿಗರು ಡಿ.ಕೆ.ಶಿವಕುಮಾರ್, ಚಿಕ್ಕಬಳ್ಳಾಪುರಕ್ಕೆ ಮಂಜೂರಾಗಿರುವ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಿ ಡಿ.ಕೆ.ಶಿವಕುಮಾರ್ ವಿರುದ್ದ ಹಾಗೂ ಮಾಜಿ ಕೃಷಿ ಸಚಿವ ಶಿವಶಂಕರರೆಡ್ಡಿ ವಿರುದ್ದ ಭಾರೀ ಪ್ರತಿಭಟನೆಗೆ ಇಳಿದಿದ್ದು ಮೆಡಿಕಲ್ ಕಾಲೇಜು ವಿಚಾರ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರು ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸುಧಾಕರ್ ಭಾವಚಿತ್ರಗಳನ್ನು ಕೈಯಲ್ಲಿ ಹಿಡಿದು ಮೆರವಣೆಯಲ್ಲಿ ಭಾಗವಹಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಪಿಕಾಡ್೯ ಬ್ಯಾಂಕ್ ನಿಂದ ಮೆರವಣಿಗೆ ಆರಂಭಿಸಿರುವ ಸುಧಾಕರ್ ಬೆಂಬಲಿಗರು ನಗರದ ಅಂಬೇಡ್ಕರ್ ವೃತ್ತದ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು. ಚಿಕ್ಕಬಳ್ಳಾಪುರ ಸೇರಿದಂತೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯಿಂದಲೂ ಸುಧಾಕರ್ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಪ್ರತಿಭಟನೆಗೆ ಬಿಜೆಪಿ ಸಾಥ್:
ಪ್ರತಿಭಟನೆಯಲ್ಲಿ ಬಿಜೆಪಿ ನೂರಾರು ಕಾರ್ಯಕರ್ತರು ಕೂಡ ಭಾಗವಹಿಸಿದ್ದಾರೆ. ಚಿಕ್ಕಬಳ್ಳಾಪುರ ಮಾತ್ರವಲ್ಲದೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದಿದ್ದಾರೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಾಗಿದೆ.