Advertisement

ದ್ವಿತೀಯ ಪಿಯು ಪರೀಕ್ಷೆಗೆ ಸಕಲ ಸಿದ್ಧತೆ

09:43 PM Mar 02, 2020 | Lakshmi GovindaRaj |

ಚಾಮರಾಜನಗರ: ಜಿಲ್ಲೆಯಲ್ಲಿ ಮಾ.4ರಿಂದ 23ರವರೆಗೆ ನಿಗದಿಯಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಯು ಸುಸೂತ್ರವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷಾ ಸಂಬಂಧ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

Advertisement

ಜಿಲ್ಲೆಯಲ್ಲಿ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಹೊಸದಾಗಿ 5787 ವಿದ್ಯಾರ್ಥಿಗಳು, ಪುನರಾವರ್ತಿತ 850 ವಿದ್ಯಾರ್ಥಿಗಳು, 257 ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಒಟ್ಟು 6894 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 3157 ಬಾಲಕರಾಗಿದ್ದು, 3737 ಬಾಲಕಿಯರಿದ್ದಾರೆ. ಕಲಾ ವಿಭಾಗದಲ್ಲಿ 2750, ವಾಣೀಜ್ಯ ವಿಭಾಗದಲ್ಲಿ 2606, ವಿಜ್ಞಾನ ವಿಭಾಗದಲ್ಲಿ 1538 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ಮುಖ್ಯ ಅಧೀಕ್ಷಕರ ನೇಮಕ: ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಪೂರ್ವ ಸಿದ್ಧತೆ ಹಾಗೂ ಕೈಗೊಳ್ಳಬೇಕಿರುವ ಅಗತ್ಯ ಕಾರ್ಯಗಳ ಕುರಿತು ಈಗಾಗಲೇ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಕೊಠಡಿ ಮೇಲ್ವಿಚಾರಕರನ್ನು ರ್‍ಯಾಂಡಮೈಸೇಷನ್‌ ಮೂಲಕ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಅಧಿಕಾರಿ ಸಿಬ್ಬಂದಿಗೆ ಗುರುತಿನ ಚೀಟಿ ವಿತರಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲ: ಪರೀಕ್ಷಾ ಅಕ್ರಮಗಳಿಗೆ ಅವಕಾಶವಾಗದಂತೆ ಜಿಲ್ಲಾ ಜಾಗೃತ ದಳವನ್ನು ನೇಮಿಸಲಾಗಿದೆ. ಆಯಾ ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಗಳು ನಡೆಯದಂತೆ ನಿಗಾ ವಹಿಸಲು ಆಯಾ ತಾಲೂಕಿನ ತಹಸೀಲ್ದಾರ್‌ ಅವರನ್ನು ನೇಮಿಸಲಾಗಿದೆ. ಪ್ರಶ್ನೆ ಪತ್ರಿಕೆ ವಿತರಣೆ, ಉತ್ತರ ಪತ್ರಿಕೆಯ ಬಂಡಲ್‌ಗ‌ಳನ್ನು ತಲುಪಿಸಲು ಎಲ್ಲಾ ಅಗತ್ಯ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದರು.

ವಿದ್ಯುನ್ಮಾನ ಉಪಕರಣಕ್ಕೆ ನಿಷೇಧ: ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಾಗಲೀ ಅಥವಾ ಪರೀಕ್ಷೆಗೆ ನಿಯೋಜಕರಾದ ಸಿಬ್ಬಂದಿಯಾಗಲೀ ಮೊಬೈಲ್‌ ಫೋನ್‌ ತರುವಂತಿಲ್ಲ. ವಿದ್ಯಾರ್ಥಿಗಳೂ ಇ-ಕ್ಯಾಮರಾ, ಲ್ಯಾಪ್‌ಟಾಪ್‌, ಕ್ಯಾಲ್ಕುಲೇಟರ್‌ ಇತರೆ ವಿದ್ಯುನ್ಮಾನ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಗೋಡೆ ಗಡಿಯಾರ ಹಾಕಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿದ್ದಲ್ಲಿ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಶುಶ‌ೂಕರನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

Advertisement

ಹೆಚ್ಚಿನ ಬಸ್‌ ಕಲ್ಪಿಸಲು ಸೂಚನೆ: ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್‌ ಸೌಲಭ್ಯ ಒದಗಿಸಿಕೊಡುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹೋಗಿಬರಲು ಅನುಕೂಲವಾಗುವಂತೆ ಬಸ್‌ ಸಂಚಾರ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ, ಸಾರಿಗೆ ಇಲಾಖೆಯ ಬಸ್‌ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಬಹುದಾಗಿದೆ ಎಂದರು.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಲ 200 ಮೀ. ವ್ಯಾಪ್ತಿಯನ್ನು ಸಿಆರ್‌ಪಿಸಿ 144ರ ಕಲಂ ಅನ್ವಯ ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ನಿಷೇಧಾಜ್ಞೆ ಹೊರಡಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್‌ ಅಂಗಡಿಗಳನ್ನು ಹಾಗೂ ಸೈಬರ್‌ ಕೇಂದ್ರಗಳನ್ನು ಮುಚ್ಚುವಂತೆಯೂ ಆದೇಶಿಸಲಾಗಿದೆ. ಯಾವುದೇ ಪರೀಕ್ಷಾ ಅಕ್ರಮಕ್ಕೆ ಅವಕಾಶವಾಗದಿರಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿ: ಮುಕ್ತ ವಾತಾವರಣದಲ್ಲಿ ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯಿದೆ 2017ನ್ನು ಜಾರಿಗೆ ತರಲಾಗಿದೆ. ಪ್ರಶೆ °ಪತ್ರಿಕೆ ಸೋರಿಕೆ, ಮಾರಾಟ, ಇನ್ನಿತರ ವದಂತಿಗಳನ್ನು ಹರಡುವ, ಪರೀಕ್ಷಾ ಅಕ್ರಮಕ್ಕೆ ಸಹಕರಿಸುವ, ಪ್ರೇರೇಪಿಸುವ, ಪ್ರೋತ್ಸಾಹಿಸುವ ವ್ಯಕ್ತಿಗಳಿಗೆ 5 ವರ್ಷಗಳ ಸೆರೆವಾಸ 5 ಲಕ್ಷ ರೂ. ದಂಡ ವಿಧಿಸಲಾಗುವುದು. ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ‌ ಕೃಷ್ಣಮೂರ್ತಿ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಮಂಜುನಾಥ ಪ್ರಸನ್ನ ಹಾಜರಿದ್ದರು.

ನಿಯಂತ್ರಣ ಕೊಠಡಿಗೆ ಸಿಬ್ಬಂದಿ ನೇಮಕ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಕಾರ್ಯ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗಿರುವ ನಿಯಂತ್ರಣ ಕೊಠಡಿಯಲ್ಲಿ ಕಾರ್ಯ ನಿರ್ವಹಿಸಲು ಮೂವರು ಗ್ರಾಮ ಲೆಕ್ಕಾಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಆದೇಶಿಸಿದ್ದಾರೆ. ಚಾಮರಾಜನಗರ ತಾಲೂಕು ಮಾದಾಪುರ ಗ್ರಾಮದ ಮಂಜುನಾಥ ಹಂಚಿನಮನೆ, ಚಂದಕವಾಡಿ ಹೋಬಳಿಯ ಆಲೂರು ಗ್ರಾಮದ ಯೆಲ್ಲಪ್ಪ ಲಮಾಣಿ, ಹರವೆ ಹೋಬಳಿಯ ಕುಲಗಾಣ ಗ್ರಾಮದ ಡಿ.ಜೆ. ಮಹೇಶ್‌ ಕುಮಾರ್‌ ನಿಯೋಜಿತಗೊಂಡಿರುವ ಗ್ರಾಮ ಲೆಕ್ಕಾಧಿಕಾರಿಗಳಾಗಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್‌ ಬಂದೋಬಸ್ತ್ ಒದಗಿಸಲಾಗಿದೆ. ಪಾರದರ್ಶಕವಾಗಿ ಪರೀಕ್ಷಾ ಪ್ರಕ್ರಿಯೆ ನಡೆಯಲು ಅಗತ್ಯವಿರುವ ಎಲ್ಲ ಸಿದ್ಧತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ 144ರ ಸೆಕ್ಷನ್‌ ಅನುಷ್ಠಾನವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು.
-ಎಚ್‌.ಡಿ. ಆನಂದಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next