Advertisement
ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮ ಸುಭಿರಕ್ಷೆಗೆ ಪೂಜೆ ಹಾಗೂ ಮಳೆ, ಬೆಳೆ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಭಕ್ತರ ಆಕರ್ಷಣೆಯ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ನಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ವಿಧ್ಯುಕ್ತ ತೆರೆ ಬಿದ್ದಿತು.ಬೆಳ್ಳಿಗ್ಗೆ ಸುಗ್ಗಿಬನದ ಸಮೀಪವಿರುವ ಬಿಲ್ಲ ರಂಗದಲ್ಲಿ ಪೂರ್ವಜರ ಜೀವನ ಪದ್ಧತಿಯನ್ನು ಬಿಂಬಿಸುವ ನೃತ್ಯ ಪ್ರಾಕಾರ, ಬಿಲ್ಲುಬಾಣಗಳನ್ನು ಹಿಡಿದು ಸಾಂಕೇತಿಕವಾಗಿ ಬೇಟೆಯಾಡುವ ಪ್ರಸಂಗ, ಕಡವೆಯ ಪಾತ್ರಧಾರಿಯನ್ನು ಅಟ್ಟಿಸಿಕೊಂಡು ಹೋಗುವ ಬೇಟೆಗಾರರ ತಂಡದ ಸದಸ್ಯರಿಗೆ ಕಡವೆ ಒದೆಯುವ ದೃಶ್ಯ ಮನಮೋಹಕವಾಗಿತ್ತು. ಕೊನೆಯಲ್ಲಿ ಕಡವೆ ಕಾಡು ಸೇರುವ ಮೂಲಕ, ಬೇಟೆಗಾರರಿಂದ ಬಚಾವಾಗುವ ದೃಶ್ಯ, ಸಾಂಪ್ರದಾಯಿಕ ಬಿಳಿ ಕುಪ್ಪಸ ದಟ್ಟಿಯನ್ನು ಧರಿಸಿದ್ದ ಗ್ರಾಮದ ಹಿರಿಯರು, ಬಿಲ್ಲರಂಗದಲ್ಲಿ ಪ್ರದರ್ಶನ ಹಾಕುತ್ತ, ಮಲೆನಾಡು ಸುಗ್ಗಿ ಇತಿಹಾಸವನ್ನು ನೆರೆದಿದ್ದವರಿಗೆ ತಿಳಿಸುತ್ತಿದ್ದರು.