ಶಿಮ್ಲಾ: ನಾಲ್ಕು ಬಾರಿ ಶಾಸಕರಾಗಿರುವ ಕಾಂಗ್ರೆಸ್ ನಾಯಕ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ 58 ವರ್ಷದ ಸುಖು ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ನಿರ್ಗಮಿತ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಮುಖೇಶ್ ಅಗ್ನಿಹೋತ್ರಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಹಿರಿಯರು ಭಾಗವಹಿಸಿದ್ದರು.
ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಕಾಂಗ್ರೆಸ್ ಹಿಮಾಚಲ ಪ್ರದೇಶ ಉಸ್ತುವಾರಿ ರಾಜೀವ್ ಶುಕ್ಲಾ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್ ಮತ್ತು ಹಿರಿಯ ನಾಯಕ ಸಚಿನ್ ಪೈಲಟ್ ಸೇರಿ ನೂತನ ಶಾಸಕರು ಉಪಸ್ಥಿತರಿದ್ದರು.
ಪುತ್ರ ಮುಖ್ಯಮಂತ್ರಿಯಾಗಲಿರುವ ಸುದ್ದಿ ತಿಳಿದ ಸುಖು ಅವರ ತಾಯಿ ತುಂಬಾ ಭಾವುಕರಾಗಿ, ”ನಾವು ಅವನು ಕೆಲಸ ಮಾಡಬೇಕೆಂದು ಬಯಸಿದ್ದೆವು, ಆದರೆ ಅವನು ಓದಿದ. ನಾವು ಅವನಿಗೆ ಕಲಿಸಿದೆವು.ಇಂದು ಬಸ್ ಚಾಲಕನ ಮಗ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗುತ್ತಿದ್ದಾನೆ” ಎಂದು ಸಂತಸ ವ್ಯಕ್ತ ಪಡಿಸಿದ್ದಾರೆ. ಈ ವಿಡಿಯೋವನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.