ಬೆಂಗಳೂರು: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ತೀವ್ರವಾಗಿದ್ದು, ಬಿಸಿಲಿನ ಆಘಾತದ ಅಪಾಯ ಎದುರಾಗಿದೆ. ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳು ಈ ನಿಟ್ಟಿನಲ್ಲಿ ಸಜ್ಜಾಗಿವೆ.
ಅತಿಯಾದ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ನಿರ್ವಹಿಸಲು ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ 5 ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ 2 ಹಾಸಿಗೆ ಮೀಸಲಿಡಲು ಆದೇಶಿಸಲಾಗಿದೆ. ಜತೆಗೆ ತುರ್ತು ಅಗತ್ಯವಿರುವ ಔಷಧಗಳನ್ನು ಶೇಖರಿಸಲು ಸೂಚಿಸಿದ್ದು, ಅತಿಯಾದ ಶಾಖದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ನಿರ್ವಹಣೆಗೆ ವೈದ್ಯಾಧಿಕಾರಿಗಳಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಆಯುಕ್ತ ಡಾ| ರಂದೀಪ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ತಲಾ 5 ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಲ್ಲಿ ಪ್ರತೀ ತಾಲೂಕು ಆಸ್ಪತ್ರೆಗಳಲ್ಲಿ 2 ಹಾಸಿಗೆ ಮೀಸಲಿಟ್ಟಿದೆ.
ಇದರೊಂದಿಗೆ ಕೋವಿಡ್ ಸಮಯದಲ್ಲಿ ತೆರೆಯಲಾಗಿದ್ದ ಐಸಿಯು ಕೇಂದ್ರಗಳನ್ನು ಪುನರ್ ಸಜ್ಜುಗೊಳಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲೂ ಅಗತ್ಯ ಔಷಧ ಸಂಗ್ರಹಿಸಿಡಲಾಗಿದೆ. ಒಆರ್‌ಎಸ್ ದ್ರಾವಣವನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಪಿ.ಸಿ. ಕುಮಾರಸ್ವಾಮಿ “ಉದಯವಾಣಿ’ಗೆ ತಿಳಿಸಿದ್ದಾರೆ.
ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಬಿರು ಬಿಸಿಲು, ಉಷ್ಣ ಅಲೆಯಲ್ಲಿ ಬೇಯುತ್ತಿದೆ. ವಿಜಯಪುರ ಜಿಲ್ಲೆಯ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ 10, ತಾಲೂಕಾಸ್ಪತ್ರೆಗಳಲ್ಲಿ ತಲಾ 5 ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ 2ರಂತೆ ಹಾಸಿಗೆಗಳನ್ನು ಮೀಸಲಿಡಲಾಗಿದೆ. ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ತತ್‌ಕ್ಷಣವೇ ಸೂಕ್ತ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಹಾಸಿಗೆಗಳನ್ನು ಮೀಸಲಿಡಲಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿ 2-3 ಹಾಗೂ ಜಿಲ್ಲಾಸ್ಪತ್ರೆಯಲ್ಲಿ 6 ಬೆಡ್‌ಗಳನ್ನು ಕಾಯ್ದಿರಿಸಲಾಗಿದೆ. ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆಗೆ ಒಳಗಾಗಿ ಬಳಲಿದವರಲ್ಲಿ ಏಳು ಜನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಮುಂದಿನ ಎರಡು ದಿನಗಳಲ್ಲಿ ಇದು ದುಪ್ಪಟ್ಟಾಗುವ ಆತಂಕವಿದೆ. ಗದಗ, ಬೆಳಗಾವಿಗಳಲ್ಲಿಯೂ ಇಂಥದ್ದೇ ಕ್ರಮ ಕೈಗೊಳ್ಳಲಾಗಿದೆ.