ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು (ಸುಮೋಟೋ) ದಾಖಲಿಸಿಕೊಂಡಿದೆ.
ಮತ್ತೊಂದೆಡೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ಗೆ ಪತ್ರ ಬರೆದು ಮೂರು ದಿನಗಳ ಒಳಗೆ ಪ್ರಕರಣದ ಸಮಗ್ರ ವರದಿ ನೀಡುವಂತೆ ಸೂಚಿಸಿದೆ.
ಸಂಸದ ಪ್ರಜ್ವಲ್ ರೇವಣ್ಣಗೆ ಸೇರಿದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅದನ್ನು ಗಮನಿಸಿರುವ ಆಯೋಗ, ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ ಎಂದು ಆಯೋಗ ತಿಳಿಸಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ರಾಷ್ಟ್ರೀಯ ಮಹಿಳಾ ಆಯೋಗ, ಘಟನೆಯನ್ನು ಆಯೋಗ ಖಂಡಿಸುತ್ತದೆ. ಈ ರೀತಿಯ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದು ಮಹಿಳೆಯರ ಮೇಲಿನ ಅಗೌರವ ಸೂಚಿಸುತ್ತದೆ. ಹೀಗಾಗಿ ಈ ಸಂಬಂಧ ಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿ ಸಮಗ್ರ ತನಿಖೆ ನಡೆಸಬೇಕು. ಕೂಡಲೇ ಆರೋಪಿಯ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಅಲ್ಲದೆ, ಪ್ರಕರಣದ ಸಮಗ್ರ ವರದಿಯನ್ನು ಮೂರು ದಿನಗಳ ಒಳಗೆ ಆಯೋಗಕ್ಕೆ ಸಲ್ಲಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಡಿಜಿಪಿ ಅಲೋಕ್ ಮೋಹನ್‌ಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.