ಮಡಿಕೇರಿ : ವ್ಯಾಪಾರಸ್ಥರು ಕಾಫಿ ಮತ್ತು ಕಾಳು ಮೆಣಸು ಖರೀದಿ ಮಾಡುವ ಸಂದರ್ಭ ಮಾರಾಟ ಮಾಡುವವರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಬೇಕು. ತಪ್ಪಿದಲ್ಲಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿನ ವ್ಯಾಪಾರಸ್ಥರು ಕಾಫಿ ಮತ್ತು ಕಾಳುಮೆಣಸು ಮಾರಾಟ ಮಾಡುವವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು.
ಬೆಳೆ ಖರೀದಿಸುವಾಗ ಸಂಶಯ ಉಂಟಾದಲ್ಲಿ ಅಂತಹ ವ್ಯಕ್ತಿಗಳ ಭಾವಚಿತ್ರ ತೆಗೆದುಕೊಳ್ಳಬೇಕು. ಮಾರಾಟಗಾರರ ಹಿನ್ನೆಲೆಯನ್ನು ಪರಿಶೀಲಿಸಿ ಎಚ್ಚರಿಕೆಯಿಂದ ವ್ಯವಹರಿಸಬೇಕು ಎಂದು ಮನವಿ ಮಾಡಿದ್ದಾರೆ.
ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳು ಪರಿಶೀಲನೆ ಮಾಡುವ ಸಂದರ್ಭ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರಸ್ಥರು ಖರೀದಿದಾರರ ವಿವರವನ್ನು ಸಂಗ್ರಹಿಸದೇ ಇರುವುದು ಕಂಡುಬಂದಲ್ಲಿ ಅಂತಹ ವ್ಯಾಪಾರಸ್ಥರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸದರಿಯವರಿಗೆ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾಫಿ ಮತ್ತು ಕಾಳು ಮೆಣಸು ಕೊಯ್ಲು ಮಾಡುವ ಕಾಲ ಇದಾಗಿದೆ. ಬೆಳೆಗಾರರು ಸಂಗ್ರಹಿಸಿಟ್ಟ ಬೆಳೆಯನ್ನು ಕಳವು ಮಾಡಿರುವ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರ ಮಾಡುವವರೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಕಾಫಿ ಮತ್ತು ಕಾಳು ಮೆಣಸು ವ್ಯಾಪಾರಸ್ಥರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವಂತೆಯೂ ತಿಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಾಹಿತಿ ನೀಡಿ
ಬೆಳೆ ವ್ಯಾಪರ ನಡೆಸುವ ಸಂದರ್ಭ ಮಾರಾಟದಾರರ ಕುರಿತು ಸಂಶಯ ಬಂದಲ್ಲಿ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸಿದರೆ ಸ್ಥಳಕ್ಕೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕವೂ ಮಾಹಿತಿ ನೀಡಿ ಸಹಕರಿಸುವಂತೆ ಎಸ್‌ಪಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ಹೆಸರು ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: Budget Session: ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ, ಫೆ.1ಕ್ಕೆ ಕೇಂದ್ರ ಬಜೆಟ್