Advertisement

7ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ

07:39 PM Aug 29, 2020 | Suhan S |

ಕಲಬುರಗಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಸೆಪ್ಟೆಂಬರ್‌ 7ರಿಂದ 19ರ ವರೆಗೆ ನಗರದ 11 ಮತ್ತು ತಾಲೂಕು ಹಂತದ ಏಳು ಸೇರಿದಂತೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷೆಯನ್ನು ವಾರ್ಷಿಕವಾಗಿ ನಡೆಯುವ ಪರೀಕ್ಷೆಯಂತೆ ಗಂಭೀರತೆ ಕಾಯ್ದುಕೊಂಡು ಸುಲಲಿತವಾಗಿನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸುಗಮವಾಗಿ ನಡೆಯಲು 10 ಜನ ಮಾರ್ಗಾಧಿಕಾರಿಗಳ ತಂಡ ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ಪರಿವೀಕ್ಷಣಾಧಿ ಕಾರಿಗಳು ಮತ್ತು ವೀಕ್ಷಕರನ್ನು ನೇಮಿಸಲಾಗುತ್ತದೆ. ಎಲ್ಲಿಯಾದರೂ ನಕಲು ಕಂಡುಬಂದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರೆ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಎರಡು ಕೋಣೆಗಳನ್ನು ಕಂಟೇನ್‌ಮೆಂಟ್‌ ವಲಯದಿಂದ ಬಂದಿರುವ, ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿ ಬಂದ ಅಥವಾ ಕೋವಿಡ್ ಲಕ್ಷಣವಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಮೀಸಲಿರಿಸಬೇಕು. ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಇನ್ನಿತರರಿಗೆ ಪ್ರವೇಶ ನಿಷೇಧವಿರುತ್ತದೆ ಎಂದರು.

ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪರೀಕ್ಷೆ ನಡೆಯುವ ಮುನ್ನ ಪರೀಕ್ಷಾ ಕೋಣೆ ಸ್ಯಾನಿಟೈಸ್‌ ಮಾಡಿಸಬೇಕು. ವಿದ್ಯಾರ್ಥಿಗಳನ್ನು ಡಿಜಿಟಲ್‌ ಥರ್ಮೋಮೀಟರ್‌ ನಿಂದ ಪರೀಕ್ಷಿಸಬೇಕು. ಹ್ಯಾಂಡ್‌ ಸ್ಯಾನಿಟೈಸರ್‌ ಬಳಕೆ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಸಾಮಾಜಿಕ ಅಂತರದೊಂದಿಗೆ ಪರೀಕ್ಷೆ ಬರೆಯಲು ಆಸನ ನಿಗದಿಪಡಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾರಣಕ್ಕೂ ಜನಸಂದಣಿಯಾಗದಂತೆ ಎಚ್ಚರವಹಿಸಬೇಕೆಂದು ನಿರ್ದೇಶನ ನೀಡಿದರು.

ಡಿಡಿಪಿಯು ಶಿವಶರಣಪ್ಪ ಮೂಳೆಗಾಂವ ಪರೀಕ್ಷೆಗೆ ಕೈಗೊಂಡಿರುವ ಸಿದ್ಧತೆಗಳನ್ನು ವಿವರಿಸಿದರು. ಡಿಎಸ್‌ಪಿ ಜೇಮ್ಸ್‌ ಮಿನೇಜಸ್‌ ಸೇರಿ ಸಹಾಯಕ ಆಯುಕ್ತರು, ತಹಶೀಲ್ದಾರರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವೀಕ್ಷಕರು ಮತ್ತು ಮಾರ್ಗಾಧಿಕಾರಿಗಳು ಇದ್ದರು.

Advertisement

 

ಪಿಯು ಪೂರಕ ಪರೀಕ್ಷೆ ಸಿಸಿಟಿವಿ, ವಿಡಿಯೋಗ್ರಾಫಿ ಕಣ್ಗಾವಲಿನಲ್ಲಿ ನಡೆಯಲಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪ್ರತ್ಯೇಕ ಮಹಿಳೆ ಮತ್ತು ಪುರುಷ ಪೊಲೀಸರನ್ನು ನೇಮಿಸಲಾಗುವುದು. ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲ. ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ಜೊತೆಗೆ ಒಂದು ಗುರುತಿನ ಚೀಟಿ ತರಬೇಕು. – ಡಾ| ಶಂಕರ ವಣಿಕ್ಯಾಳ, ಅಪರ ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next