ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ನಿಂದಾಗಿ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅತಿ ತುರ್ತಾಗಿ ತಲಾ ಒಂದು ಎಕರೆ ಜಮೀನನ್ನು ಆದ್ಯತೆಯ ಮೇರೆಗೆ ಗುರುತಿಸಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣಗಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್19 ಸೋಂಕಿತರ ಚಿಕಿತ್ಸೆಗಾಗಿ 14 ವೆಂಟಿಲೇಟರ್ ಗಳನ್ನು ಪೂರೈಸಲಾಗಿದೆ. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ, ಕೋಟ್ಯಂತರ ರೂ. ಬಿಡುಗಡೆ ಮಾಡಲಾಗಿದೆ. ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು. ಜಿಲ್ಲೆಯಲ್ಲಿ ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಕಿಟ್‌ಗಳನ್ನು ಮತ್ತಷ್ಟು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೋವಿಡ್ ಕೇರ್ ಸೆಂಟರ್‌ನಲ್ಲಿ ಸಮರ್ಪಕವಾಗಿ ಊಟ, ಉಪಾಹಾರ, ಕುಡಿಯುವ ನೀರು, ಔಷಧಗಳನ್ನು ಪೂರೈಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಅವರಲ್ಲಿ ಆತ್ಮವಿಶ್ವಾಸ ತುಂಬಿ ಅವರನ್ನು ಗುಣಮುಖರನ್ನಾಗಿಸುವ ಯತ್ನಿಸಬೇಕು. ಕೋವಿಡ್ ಆಸ್ಪತ್ರೆಗಳಲ್ಲಿ ಸ್ಪಚ್ಛತೆ ಕಾಪಾಡಿಕೊಳ್ಳಬೇಕು. ನಿರಂತರ ವಿದ್ಯುತ್ ಪೂರೈಸಬೇಕು ಎಂದರು.
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಯಾವುದೇ ಔಷಧೋಪಚಾರಗಳ ಕೊರತೆಯಿಲ್ಲ. 108ನ 12 ವಾಹನಗಳು 18 ಆಂಬ್ಯುಲೆನ್ಸ್‌ಗಳು, 10 ಮೊಬೈಲ್ ವ್ಯಾನ್‌ಗಳು, ಅಗತ್ಯ ಸಂಖ್ಯೆಯ ಮಾಸ್ಕ್ಗಳು, ಸ್ಯಾನಿಟೈಸರ್, ಪಿಪಿ ಕಿಟ್‌ಗಳಿದ್ದು ಸಿಬ್ಬಂದಿ ಕೊರತೆ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ಜಿಲ್ಲೆಯ ಕೃಷಿಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸಚಿವರು ನಿರ್ದೇಶಿಸಿದರು. ಜಿಲ್ಲೆಯ ಹಲವೆಡೆ ರಸ್ತೆಗಳು ದುರಸ್ತಿಗೊಂಡಿವೆ. ಅವುಗಳನ್ನು ಕೂಡಲೇ ಸಂಚಾರ ಯೋಗ್ಯವಾಗಿಸಲು ಪ್ರಸ್ತಾವನೆ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಚವ್ಹಾಣಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದಾಗ, 45 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಶಾಸಕರಾದ ವೆಂಕಟರೆಡ್ಡಿ ಮುದ್ನಾಳ್, ನರಸಿಂಹ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ಜಿಪಂ ಅಧ್ಯಕ್ಷ ಬಸವನಗೌಡ ಯಡಿಯಾಪೂರ, ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ, ಜಿಲ್ಲಾ ಧಿಕಾರಿ ಎಂ. ಕೂರ್ಮಾರಾವ್, ಎಸ್‌ಪಿ ಋಷಿಕೇಶ್ ಸೋನಾವಣೆ, ಜಿಪಂ ಸಿಇಒ ಶಿಲ್ಪಾ ಶರ್ಮಾ ಇದ್ದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.