Advertisement

ಮನೆ ಬಾಗಿಲಿಗೆ ತರಕಾರಿ, ದಿನಸಿ ಪೂರೈಕೆ

03:51 PM Apr 21, 2020 | mahesh |

ಹಾಸನ: ಕೋವಿಡ್-19 ನಿಯಂತ್ರಣದ ಸಂಬಂಧ ಜಾರಿಯಾಗಿರುವ ಲಾಕ್‌ಡೌನ್‌ ಮೇ 3ರ ವರೆಗೂ ವಿಸ್ತರಣೆಯಾಗಿರುವುದರಿಂದ ಸಂಘ ಸಂಸ್ಥೆಗಳು, ಸ್ವಯಂ ಸೇವಾ ಮನೋಭಾವದಿಂದ ಮನೆ ಬಾಗಿಲಿಗೆ ತರಕಾರಿ ಹಾಗೂ ಅಗತ್ಯ ವಸ್ತುಗಳನ್ನು ತಲುಪಿಸುವ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಕೋರಿದರು.

Advertisement

ಸಾರ್ವಜನಿಕರಿಗೆ ಅನುಕೂಲ ಮಾಡಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಲಾಕ್‌ಡೌನ್‌ ಅವಧಿಯಲ್ಲಿ ಮಧ್ಯವರ್ತಿಗಳು ಹೆಚ್ಚು ದರಕ್ಕೆ ದಿನಬಳಕೆ ವಸ್ತುಗಳನ್ನು ಮಾರಾಟ ಮಾಡಿ ಸಾರ್ವಜನಿಕರನ್ನು ಶೋಷಣೆ ಮಾಡುತ್ತಿದ್ದಾರೆ. ರೈತರಿಗೂ ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಹಾಗಾಗಿ ಸಂಘ ಸಂಸ್ಥೆಗಳು ಎಪಿಎಂಸಿಗಳಲ್ಲಿ ಸಗಟು ದರಕ್ಕೆ ತರಕಾರಿ, ದಿನಸಿ ಖರೀದಿಸಿ ಲಾಭಾಂಶವನ್ನು ಅಪೇಕ್ಷಿಸದೇ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಲಘು ವಾಹನಗಳ ಮೂಲಕ ಮಾರಾಟ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಹೆಚ್ಚಿನ ದರ ಪಡೆದರೆ ಕ್ರಮ ಕೈಗೊಳ್ಳಿ: ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಒಂದೊಂದು ವಾರ್ಡ್‌ಗಳಲ್ಲಿ ಒಂದು ಸ್ವಯಂ ಸೇವಾ ಸಂಸ್ಥೆ ತರಕಾರಿ ದಿನಸಿ ಮಾರಾಟ ಮಾಡಿದರೆ, ಸಾರ್ವಜನಿಕರಿಗೆ ಸುಲಭವಾಗಿ ನ್ಯಾಯಯುತ ದರಗಳಲ್ಲಿ ಅಗತ್ಯ ತರಕಾರಿಗಳು ದೊರೆಯುತ್ತವೆ. ದಿನಸಿ ಹಾಗೂ ತರಕಾರಿ ಮಾರಾಟಗಾರರು ಹೆಚ್ಚಿನ ದರಕ್ಕೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತಾ. ನಗರ ಸಭೆಯ ಆಯುಕ್ತ ಕೃಷ್ಣಮೂರ್ತಿ, ಎಪಿಎಂಸಿ ಕಾರ್ಯದರ್ಶಿ ಶ್ರೀಹರಿ, ಜಿಲ್ಲಾ ವಾರ್ತಾಧಿಕಾರಿ ವಿನೋದ್‌ಚಂದ್ರ, ತಹಶೀಲ್ದಾರ್‌ ಶಿವ ಶಂಕರಪ್ಪ, ರೆಡ್‌ ಕ್ರಾಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಪಿ. ಮೋಹನ್‌, ಸ್ಕೌಟ್ಸ್‌ ಮತ್ತು ಗೈಡ್ಸ್‌ ಮುಖ್ಯಸ್ಥ ಡಾ. ವೀರಭದ್ರಪ್ಪ ಹಾಗೂ ಇತರೆ ಅಧಿಕಾರಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next