ಮೈಸೂರು: ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಆಧರಿಸಿ, ಕ್ಷೇತ್ರದ ಜನರು ಈ ಬಾರಿಯೂ ತಮಗೆ ಬೆಂಬಲ ನೀಡುತ್ತಾರೆಂಬ ವಿಶ್ವಾಸವಿದ್ದು, ಇದಕ್ಕೆ ತಮ್ಮ ಸಹಕಾರಬೇಕೆಂದು ಪಕ್ಷದ ಕಾರ್ಯಕರ್ತರನ್ನು ಶಾಸಕ ವಾಸು ಮನವಿ ಮಾಡಿದರು.
ನಗರದ ಜಯಲಕ್ಷ್ಮೀಪುರಂನ ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಹಿತೈಷಿಗಳು, ಚಾಮರಾಜ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಚಾಮರಾಜ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡ ಲಾಗಿದೆ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ಸಹಕಾರದಿಂದ ಚಾಮರಾಜ ಕ್ಷೇತ್ರಕ್ಕೆ 1700 ಕೋಟಿ ರೂ.ಗೂ ಹೆಚ್ಚಿನ ಅನುದಾನವನ್ನು ಅಭಿವೃದ್ಧಿಗೆ ವಿನಿಯೋಗಿಸಲಾಗಿದೆ. ಮಹಾರಾಣಿ ವಾಣಿಜ್ಯ ಕಾಲೇಜು ನಿರ್ಮಾಣ, ಜಯದೇವ ಆಸ್ಪತ್ರೆ, ಟ್ರಾಮಾ ಸೆಂಟರ್, ಆಯುರ್ವೇದ ಹಾಗೂ ಪಂಚಕರ್ಮ ಆಸ್ಪತ್ರೆಗಳನ್ನು ನಿರ್ಮಿಸಿ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಅಲ್ಲದೆ ಕ್ಷೇತ್ರದ ಪ್ರತಿ ಬಡಾವಣೆಗಳಲ್ಲಿ ರಸ್ತೆ, ಒಳಚರಂಡಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಲ¸Âಗಳಿಗೆ ಒತ್ತು ನೀಡಲಾಗಿದೆ. ಈ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಜನರು ಮತ್ತೂಮ್ಮೆ ತಮಗೆ ಬೆಂಬಲ ನೀಡುವ ವಿಶ್ವಾಸವಿದೆ, ಇದಕ್ಕೆ ನಿಮ್ಮ ಸಹಕಾರವೂ ಅಗತ್ಯವಿದೆ ಎಂದು ಮನವಿ ಮಾಡಿದರು.
ಮಾಜಿ ಮೇಯರ್ ಬಿ.ಕೆ.ಪ್ರಕಾಶ್ ಮಾತನಾಡಿ, ಶಾಸಕ ವಾಸು ಅವರಿಗೆ ಅಭಿವೃದ್ಧಿ ಕೆಲಸಗಳೇ ಶ್ರೀರಕ್ಷೆಯಾಗಿದ್ದು, ವಾಸು ಅವರಂತಹ ವ್ಯಕ್ತಿಗಳು ಚುನಾವಣೆಯಲ್ಲಿ ಗೆದ್ದರೆ ಜನರ ಸಮಸ್ಯೆಗಳನ್ನು ಅರಿತು ಕೆಲಸ ಮಾಡಲು ಸಾಧ್ಯ ಎಂದರು. ಇದೇ ವೇಳೆ ಒಕ್ಕಲಿಗ ಮುಖಂಡರು ಶಾಸಕ ವಾಸು ಅವರಿಗೆ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ನೀಡುವ ಮೂಲಕ ಚುನಾವಣೆಯಲ್ಲಿ ಗೆಲವು ಸಾಧಿಸಲಿ ಎಂದು ಹಾರೈಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಮಾಜಿ ಮೇಯರ್‌ಗಳಾದ ಟಿ.ಬಿ.ಚಿಕ್ಕಣ್ಣ, ಮೋದಾಮಣಿ ಸೇರಿದಂತೆ ನಿವೃತ್ತ ಪೊಲೀಸ್ ಅಧಿಕಾರಿಗಳು, ಸಾಹಿತಿಗಳು, ಪಕ್ಷದ ಮುಖಂಡರು ಹಾಜರಿದ್ದರು.