ಚಳ್ಳಕೆರೆ: ನಿಷ್ಪಕ್ಷಪಾತ ಮತ್ತು ಪಾರದರ್ಶಕ ಚುನಾವಣೆ ನಡೆಯಬೇಕಾದರೆ ಅದಕ್ಕೆ ಕಂದಾಯಾಧಿಕಾರಿಗಳು, ಗ್ರಾಮಲೆಕ್ಕಿಗರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಕಾರಿಗಳು ಹಾಗೂ ಮತಗಟ್ಟೆ ಅಧಿಕಾರಿಗಳ ಸಹಕಾರ ಪ್ರಮುಖವಾದುದು ಎಂದು ಸಹಾಯಕ ಚುನಾವಣಾಧಿಕಾರಿ ಎಸ್. ರಾಜಶೇಖರ್ ಹೇಳಿದರು.
ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣಾ ಕಾರ್ಯ ನಿರ್ವಹಿಸುವ ಕುರಿತು ಕಂದಾಯಾಧಿಕಾರಿಗಳು, ಗ್ರಾಮಲೆಕ್ಕಿಗರು ಮತ್ತು ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು. ಯಾವುದೇ ಚುನಾವಣೆಗಳು ನಡೆದರೂ ಅದಕ್ಕೆ ಸಿಬ್ಬಂದಿಯ ಸ್ಪಂದನೆ ಮುಖ್ಯ. ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಸಿಬ್ಬಂದಿ ವರ್ಗ ಹೆಚ್ಚು ಕ್ರಿಯಾಶೀಲವಾಗಿ ಸ್ಪಂದಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಏಪ್ರಿಲ್ 18ರಂದು ಮೊದಲ ಹಂತದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೂ ಚುನಾವಣೆ ನಡೆಯಲಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಮತದಾನ ಜಾಗೃತಿಗೆ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಏಳು ಕಡೆ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲಾ ಸೆಕ್ಟರ್ ಅಧಿಕಾರಿಗಳು ತಮ್ಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾವುದೇ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಕೂಡಲೇ ನನಗಾಗಲೀ, ತಹಶೀಲ್ದಾರ್‌ಗಾಗಲೀ ಮಾಹಿತಿ ನೀಡುವಂತೆ ಸೂಚನೆ ನೀಡಿದರು.
ಎಲ್ಲರೂ ಸೇರಿ ಸಹಕಾರದಿಂದ ಯಾವುದೇ ಲೋಪವಾಗದಂತೆ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ನಡೆಸೋಣ ಎಂದು ತಿಳಿಸಿದರು. ತಹಶೀಲ್ದಾರ್ ತುಷಾರ್ ಬಿ. ಹೊಸೂರ್ ಮಾತನಾಡಿ, ಈಗಾಗಲೇ ಸ್ವೀಪ್ ಸಮಿತಿ ಮೂಲಕ ಮತದಾನ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಸಂಬಂಧ ಪಟ್ಟ ಮತಗಟ್ಟೆ ಅಧಿಕಾರಿಗಳಿಂದ ಪರಿಶೀಲನೆಯನ್ನೂ ನಡೆಸಲಾಗಿದೆ. ಯಾವುದೇ ರೀತಿಯ ಸಮಸ್ಯೆ ಉಂಟಾದಲ್ಲಿ ಕೂಡಲೇ ಗಮನಕ್ಕೆ ತರಬೇಕೆಂದರು.
ಸಭೆಯಲ್ಲಿ ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು, ತೋಟಗಾರಿಕೆ ಇಲಾಖೆ ಅಧಿಕಾರಿ ವಿರೂಪಾಕ್ಷಪ್ಪ, ಸಹಾಯಕ
ಕೃಷಿ ನಿರ್ದೇಶಕ ಎನ್. ಮಾರುತಿ, ಕಂದಾಯಾಧಿಕಾರಿಗಲಾದ ಶರಣಬಸಪ್ಪ, ಶಾಂತಪ್ಪ, ಗ್ರಾಮಲೆಕ್ಕಾಧಿಕಾರಿಗಳಾದ ಲಿಂಗೇಗೌಡ, ರಾಜೇಶ್ ಮುಂತಾದವರು ಉಪಸ್ಥಿತರಿದ್ದರು.