ಕೆ.ಆರ್.ಪೇಟೆ: ಕಾಂಗ್ರೆಸ್ ಪಕ್ಷದಿಂದ ಮಾತ್ರ ಈ ರಾಜ್ಯವನ್ನು ಉಳಿಸಲು ಸಾಧ್ಯ. ಸಿದ್ದರಾಮಯ್ಯನಿಗೆ ಶಕ್ತಿ ತುಂಬಬೇಕಾದರೆ, ನಾನು ಮತ್ತೆ ಮುಖ್ಯಮಂತ್ರಿ ಆಗಬೇಕಾದರೆ ರಾಜ್ಯದ ಜನತೆ ನನ್ನನ್ನು ಹರಸಿ, ಆಶೀರ್ವದಿಸಿ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಇತಿಹಾಸ ನಿರ್ಮಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೈ ಮುಗಿದು ಮನವಿ ಮಾಡಿದರು.
ಮಂಡ್ಯ ಜಿಲ್ಲಾ ಕುರುಬರ ಸಂಘ ಹಾಗೂ ತಾಲೂಕು ಕುರುಬರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ 535ನೇ ಕನಕ ಜಯಂತ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನತೆಯ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಮುಖ್ಯಮಂತ್ರಿಯಾದರೆ ರಾಜ್ಯದ ನಾಲ್ಕು ಕೋಟಿ ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದರಲ್ಲದೆ, ಸಾಮಾನ್ಯ ರೈತನ ಮಗನಾಗಿರುವ ನನಗೆ ರಾಜ್ಯದ ಜನತೆ ಶಕ್ತಿ ತುಂಬಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದರು.
ಒಂದು ವೇಳೆ ನೀವು ಬಿಜೆಪಿಗೆ ಮತ ನೀಡಿದರೆ ಬಸವರಾಜ ಬೊಮ್ಮಾಯಿ ಕೈ ಮೇಲಾಗುತ್ತದೆ. ಜೆಡಿಎಸ್ಗೆ ಬೆಂಬಲಿಸಿದರೆ ಕುಮಾರಸ್ವಾಮಿ ಶಕ್ತಿ ಹೆಚ್ಚಾಗುತ್ತದೆ. ಆದ್ದರಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ ಸೇರಿ ಎಲ್ಲ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲು ಆಶೀರ್ವದಿಸಬೇಕೆಂದು ಸಿದ್ದರಾಮಯ್ಯ ಮನವಿ ಮಾಡಿದರು.
Related Articles
ಸಿದ್ದರಾಮಯ್ಯ ನಾಮಬಲ: ಶಾಸಕ ಬೈರತಿ ಸುರೇಶ್ ಮಾತನಾಡಿ, ಪ್ರಬಲ ನಾಯಕರಾಗಿ ಹೊರಹೊಮ್ಮಿರುವ ಸಿದ್ದರಾಮಯ್ಯನವರ ನಾಮಬಲದಿಂದಲೇ ಕನಿಷ್ಠ 40-50 ಶಾಸಕರು ಆಯ್ಕೆಯಾಗುತ್ತಿರುವ ಇಂದಿನ ದಿನಮಾನದಲ್ಲಿ ಅವರು ಮತ್ತೆ ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸಮರ್ಥವಾಗಿ ಆಡಳಿತ ನಡೆಸಬೇಕಾದರೆ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದು ಅನಿವಾರ್ಯ ಎಂದರು.
ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ, 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.