ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ನ.11 ರಿಂದ ಉಪ ಚುನಾವಣೆಯ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಕ್ಷೇತ್ರದ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ನ್ಯಾಯಾಂಂಗಣದಲ್ಲಿ ಶನಿವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಉಪ ಚುನಾವಣೆಯಲ್ಲಿ ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಬೇಕೆಂದು ಕೋರಿದರು.
ನ.11ಕ್ಕೆ ಅಧಿಸೂಚನೆ ಪ್ರಕಟ: ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲು ನ.11 ರಂದು ಸೋಮವಾರ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದಿನಿಂದಲೇ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತಿ ಜಾರಿಗೆ ಬರಲಿದೆ. ಜಿಲ್ಲಾಡಳಿತ ಚುನಾವಣೆಯನ್ನು ನಡೆಸಲು ಎಲ್ಲ ರೀತಿಯ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ನ.11 ರಿಂದಲೇ ನಾಮಪತ್ರಗಳ ಸ್ವೀಕಾರವನ್ನು ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸ್ವೀಕರಿಸಲಾಗುವುದು ಎಂದರು.
ನೀತಿ ಸಂಹಿತೆ ಉಲ್ಲಂಘನೆಯಾಗಬಾರದು: ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡದಂತೆ ಎಚ್ಚರ ವಹಿಸಬೇಕು. ಕಾಲಕಾಲಕ್ಕೆ ಆಯೋಗ ನೀಡುವ ಸೂಚನೆಗಳನ್ನು ಪಾಲಿಸಬೇಕೆಂದ ಅವರು, ಯಾರೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದರೂ ಅವರ ವಿರುದ್ಧ ಆಯೋಗದ ನಿರ್ದೇಶನಂತೆ ಕಟ್ಟುನಿಟ್ಟಿನ ಕ್ರಮ ವಹಿಸುವುದಾಗಿ ತಿಳಿಸಿದರು.
ರಾಜಕೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಚುನಾವಣಾ ವೆಚ್ಚ, ಚುನಾವಣಾ ಸಾಮಗ್ರಿಗಳ ದರಪಟ್ಟಿ, ನೀತಿ ಸಂಹಿತೆಯ ಪ್ರಮುಖ ವಿಷಯಗಳ ಕುರಿತು ಜಿಲ್ಲಾಧಿಕಾರಿ ಆರ್.ಲತಾ ಸಭೆಯಲ್ಲಿ ವಿವರಿಸಿದರು. ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಚುನಾವಣಾ ವೆಚ್ಚದ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಖಜಾನೆಯ ಉಪ ನಿರ್ದೇಶಕರಾದ ಮುನಿರೆಡ್ಡಿ, ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ನ.11 ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ಉಪ ಚುನಾವಣೆಗೆ ಆಧಿಸೂಚನೆ ಪ್ರಕಟಗೊಳ್ಳಲಿದ್ದು, ಕ್ಷೇತ್ರದಲ್ಲಿ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ. ನ.18ಕ್ಕೆ ನಾಮಪತ್ರಗಳ ಸಲ್ಲಿಕೆಗೆ ಕೊನೆ ದಿನವಾಗಿದೆ.
-ಆರ್.ಲತಾ, ಜಿಲ್ಲಾಧಿಕಾರಿ