ಹೊಸದಿಲ್ಲಿ: ಸಾರ್ವಜನಿಕವಾಗಿ ಯಾವ ಅಭಿಪ್ರಾಯ ಅಥವಾ ಒಂದು ವರ್ಗ ಹೊಂದಿರುವ ನೈತಿಕತೆಯ ಆಧಾರದ ಮೇಲೆ ನಿರ್ಧಾರ ಕೈಗೊಳ್ಳುವುದಿಲ್ಲ. ಏನಿದ್ದರೂ ಸಂವಿಧಾನದಲ್ಲಿ ಉಲ್ಲೇಖಗೊಂಡ ನಿಯಮಗಳ ಅನ್ವಯ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ದೇಶದಲ್ಲಿ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಬೇಕು ಎಂದು ಸಲ್ಲಿಕೆಯಾಗಿರುವ ಅರ್ಜಿಗಳ ಏಳನೇ ದಿನದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಅರ್ಜಿದಾರರ ಪರ ವಾದಿಸಿದ ನ್ಯಾಯವಾದಿ ಸೌರಭ್ ಕೃಪಾಲ್, ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮಗಳಲ್ಲಿ ಮಾತನಾಡಿದ ಮತ್ತು ಅಭಿಪ್ರಾಯ ಸಂಗ್ರಹಣೆ ವೇಳೆ ಶೇ.99 ಮಂದಿ ಮದುವೆಯಾಗುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು. ಇದೇ ಅಭಿಪ್ರಾಯವನ್ನು ಮತ್ತೂಬ್ಬ ನ್ಯಾಯವಾದಿ ಮೇನಕಾ ಗುರುಸ್ವಾಮಿ ಕೂಡ ವ್ಯಕ್ತಪಡಿಸಿದರು. ಅದಕ್ಕೆ ಉತ್ತರಿಸಿದ ನ್ಯಾಯಪೀಠ “ಸಾರ್ವಜನಿಕ ಅಥವಾ ಒಂದು ಗುಂಪಿನ ಅಭಿಪ್ರಾಯ ಕೋರ್ಟ್‌ಗೆ ಮಾನ್ಯತೆ ಅಲ್ಲ. ಸಂವಿಧಾನದ ನಿಯಮಗಳೇ ನಮಗೆ ಅಂತಿಮ’ ಎಂದಿತು.
ಸಮಿತಿ ರಚನೆ: ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸದೇ ಸಲಿಂಗ ಜೋಡಿಗಳ ನೈಜ ಮಾನವೀಯ ಸಮಸ್ಯೆಗಳಿಗೆ ಆಡಳಿತಾತ್ಮಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಪುಟ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಬುಧವಾರ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರಕಾರ ತಿಳಿಸಿದೆ. ಸರಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.