ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ಜಾಮೀನು ನೀಡಿದೆ.
ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ಇಡಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, ಅರವಿಂದ್ ಕೇಜ್ರಿವಾಲ್ ಅವರು ಈಗಾಗಲೇ 90 ದಿನಗಳ ಜೈಲುವಾಸವನ್ನು ಅನುಭವಿಸಿದ್ದಾರೆ ಮತ್ತು ಅವರು ಚುನಾಯಿತ ನಾಯಕ ಎಂಬುದು ಪ್ರಜ್ಞೆಯಲ್ಲಿದೆ ಎಂದು ಗಮನಿಸಿದೆ.
ಮಧ್ಯಂತರ ಜಾಮೀನು ಸಿಕ್ಕರೂ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿಯೇ ಉಳಿಯಲಿದ್ದಾರೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದ್ದರಿಂದ ತಿಹಾರ್ ಜೈಲಿನಲ್ಲಿಯೇ ಇರಬೇಕಾಗುತ್ತದೆ.
“ಅರವಿಂದ್ ಕೇಜ್ರಿವಾಲ್ ಅವರು 90 ದಿನಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದಾರೆ. ಅವರು ಚುನಾಯಿತ ನಾಯಕರಾಗಿದ್ದಾರೆ. ಅವರು ಪಾತ್ರದಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುದು ಅವರಿಗೆ ಬಿಟ್ಟದ್ದು” ಎಂದು ನ್ಯಾಯಾಲಯ ಹೇಳಿದೆ.