ಹೊಸದಿಲ್ಲಿ: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸರ್ವೋಚ್ಛ ನ್ಯಾಯಾಲಯವು ಸೋಮವಾರ ತಡೆಯಾಜ್ಞೆ ನೀಡಿದೆ. ಇದರಿಂದ ಜೆಡಿಎಸ್ ಪಕ್ಷದ ಏಕೈಕ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸುಳ್ಳು ದಾಖಲೆಗಳನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು ಎಂದು ದೇವರಾಜೇ ಗೌಡ ಅವರು ದೂರು ಸಲ್ಲಿಸಿದ್ದರು. ವಿಚಾರಣೆಯ ಬಳಿ ಸೆ.1ರಂದು ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಘೋಷಿಸಿತ್ತು. ಅಮಾನತು ಆದೇಶಕ್ಕೆ ತಾತ್ಕಾಲಿಕ ತಡೆ ನೀಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದರೂ, ಅದನ್ನೂ ನ್ಯಾಯಾಲಯ ತಿರಸ್ಕರಿಸಿತ್ತು.
ಇದನ್ನೂ ಓದಿ:Cauvery Issue;ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ನಿತ್ಯ 5000 ಕ್ಯೂಸೆಕ್ಸ್ ನೀರು ಬಿಡಲು ಸೂಚನೆ
ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದರು. ಇದೀಗ ಸಿಜೆಐ ಚಂದ್ರಚೂಡ್ ಅವರಿದ್ದ ತ್ರಿಸದಸ್ಯ ಪೀಠವು ನಾಲ್ಕು ವಾರಗಳ ಕಾಲ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಆದರೆ, ಇದೇ ವೇಳೆ ಸುಪ್ರೀಂ ಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಜ್ವಲ್ ರೇವಣ್ಣ ಅವರು ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸಬಹುದು, ಆದರೆ ಅವರಿಗೆ ಯಾವುದೇ ಮತದಾನದ ಅಧಿಕಾರ ಇರುವುದಿಲ್ಲ. ಸರ್ಕಾರದಿಂದ ಬರುವ ಭತ್ಯೆಗಳನ್ನ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಪೀಠವು ಆದೇಶಿಸಿದೆ.