ನವದೆಹಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಭ್ರಷ್ಟಾಚಾರ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿ ದೊಡ್ಡ ರಿಲೀಫ್ ನೀಡಿದೆ.
2006-07ರಲ್ಲಿ ಅಕ್ರಮವಾಗಿ ಎಕರೆಗಟ್ಟಲೆ ಭೂಮಿಯನ್ನು ಡಿನೋಟಿಫೈ ಮಾಡಿ ಉದ್ಯಮಿಗಳಿಗೆ ಜಮೀನು ಮಂಜೂರು ಮಾಡಿದ ಆರೋಪ ಹೊತ್ತಿದ್ದು, ಉಪಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.ಭೂ ಹಂಚಿಕೆ ಹಗರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು.
2020 ರಲ್ಲಿ, ಕರ್ನಾಟಕ ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್‌ಐಆರ್ ಅನ್ನು ರದ್ದುಗೊಳಿಸಬೇಕೆಂಬ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ ಅವರು ತನಿಖೆ ವಿಳಂಬಕ್ಕೆ ಪೊಲೀಸರಿಗೆ ಛೀಮಾರಿ ಹಾಕಿದ್ದರು. “ವಿಳಂಬವು ಉದ್ದೇಶಪೂರ್ವಕವಾಗಿದೆ ಎಂದು ಸ್ಪಷ್ಟವಾಗಿ ತಿಳಿಯುತ್ತದೆ” ಎಂದು ನ್ಯಾಯಾಧೀಶರು ಹೇಳಿದ್ದರು.
2013ರಲ್ಲಿ ವಾಸುದೇವ ರೆಡ್ಡಿ ಎಂಬುವರ ಖಾಸಗಿ ದೂರಿನ ಮೇರೆಗೆ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ ಐಟಿ ಪಾರ್ಕ್ ಅಭಿವೃದ್ಧಿ ಪಡಿಸಲು ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಲೋಕಾಯುಕ್ತ ಪೊಲೀಸರು ಎರಡು ಬಾರಿ ಯಡಿಯೂರಪ್ಪ ವಿರುದ್ದದ ಆರೋಪದಲ್ಲಿ ಹುರುಳಿಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದರು, ಅದನ್ನು ಹೈಕೋರ್ಟ್ ತಿರಸ್ಕರಿಸಿತ್ತು.