ನವದೆಹಲಿ: ಪುತ್ರ ಪ್ರಜ್ವಲ್ ರೇವಣ್ಣ(Prajwal Revanna) ದೈಹಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಅಪಹರಣ ಕೇಸ್ ನಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನಿಗೆ(Anticipatory Bail) ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್(Supreme court) ಶುಕ್ರವಾರ (ಅ.18) ನಿರಾಕರಿಸಿದ್ದು, ಈ ಮೂಲಕ ಭವಾನಿ ರೇವಣ್ಣಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾ.ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ ವಜಾಗೊಳಿಸಿ ಆದೇಶ ನೀಡಿದೆ.
ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಕರ್ನಾಟಕ ಸರ್ಕಾರ ಭವಾನಿ ರೇವಣ್ಣಗೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಅದಕ್ಕೆ ಸುಪ್ರೀಂಕೋರ್ಟ್ ಜುಲೈನಲ್ಲಿ ನೋಟಿಸ್ ಜಾರಿಗೊಳಿಸಿತ್ತು.
ಈ ಪ್ರಕರಣದಲ್ಲಿ ರಾಜಕೀಯ ಪಕ್ಷಗಳು ರಾಜಕೀಯಗೊಳಿಸಬಾರದು ಎಂದು ಸುಪ್ರೀಂಕೋರ್ಟ್ ಪೀಠ ಈ ಮೊದಲು ಸೂಚನೆ ನೀಡಿತ್ತು. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಹೈಕೋರ್ಟ್ ಗೆ ಸಲ್ಲಿಸಿದ್ದು, ವಿಚಾರಣೆ ಇನ್ನಷ್ಟೇ ನಡೆಯಬೇಕಾಗಿದೆ.