ಸುರಪುರ: ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಅಮೂಲ್ಯವಾದ ಜೀವ ಉಳಿಸಿಕೊಳ್ಳಬೇಕು ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಕರೆ ನೀಡಿದರು.
ಸಂಚಾರಿ ನಿಯಮ ಪಾಲನೆ ಮತ್ತು ರಸ್ತೆ ಸುರಕ್ಷತೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಮಿನಿ ಮ್ಯಾರಥಾನ್‌ಗೆ ಚಾಲನೆ ನೀಡಿ, ನಂತರ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಸಂಚಾರಿ ನಿಯಮ ಪಾಲನೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೈಕ್ ಸವಾರರು, ಆಟೋ ಚಾಲಕರು ಕಡ್ಡಾಯವಾಗಿ ಚಾಲನೆ ಪರವಾನಗಿ ಪಡೆದುಕೊಳ್ಳಬೇಕು. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಇತರರು ಹೆಲ್ಮೆಟ್ ಇಲ್ಲದೇ ಬೈಕ್ ಚಲಾಯಿಸಬಾರದು. ನಿಮ್ಮನ್ನು ನಂಬಿಕೊಂಡಿರುವ ಕಟುಂಬ ಬೆನ್ನಿಗೆ ಇದೆ ಎಂಬ ಅರಿವು ನಿಮಗಿರಲಿ, ಇದನ್ನು ಗಮನದಲ್ಲಿಟ್ಟುಕೊಂಡು ವಾಹನ ಚಲಾಯಿಸಬೇಕು. ಜೀವ ವಿಮೆ ಸೇರಿದಂತೆ ವಾಹನ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಓಟ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯವು ಸದೃಢವಾಗುತ್ತದೆ. ದೈಹಿಕ ಸಾಮರ್ಥ್ಯ ಹೆಚ್ಚಿಸುತ್ತದೆ. ಕಾರಣ ಯುವಕರು ಕೆಟ್ಟ ಹವ್ಯಾಸಗಳಿಂದ ದೂರವಿದ್ದು, ಒಳ್ಳೆಯ ಹವ್ಯಾಸಗಳನ್ನು ರೂಢಸಿಕೊಳ್ಳಬೇಕು. ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು.
ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ ಮಾತನಾಡಿ, ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಪಾಲಿಸಬೇಕು. ನಗರದ ವಿವಿಧೆಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಹೆಲ್ಮೆಟ್ ಧರಿಸದವರ ವಿರುದ್ಧ ವಾರೆಂಟ್ ಹಾಗೂ ನೋಟಿಸ್ ನೀಡಲಾಗುವುದು. ಕಾರಣ ಬೈಕ್ ಸವಾರರು ಚಾಲನಾ ಪರವಾನಗಿ, ಹೆಲ್ಮೆಟ್, ಜೀವ ವಿಮೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಿಪಿಐ ಎಸ್.ಎಂ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಇಲ್ಲಿ ರಸ್ತೆ ಸುರಕ್ಷಾ ನಿಯಮಗಳನ್ನು ಅನುಷ್ಠಾನಗೊಳಿಸುವ ಅಗತ್ಯವಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.
ಇದಕ್ಕೂ ಮೊದಲು ತಿಮ್ಮಾಪುರ ಬಸ್ ನಿಲ್ದಾಣದಲ್ಲಿ ಶಾಸಕ ನರಸಿಂಹ ನಾಯಕ (ರಾಜುಗೌಡ), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಮಿನಿ ಮ್ಯಾರಥಾನ್‌ಗೆ ಚಾಲನೆ ನೀಡಿದರು. ತಾಪಂ ಇಒ ಅಮರೇಶ, ಸಿಡಿಪಿಒ ಲಾಲ್ ಸಾಬ್ ಪೀರಾಪುರ, ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ), ಶಂಕರನಾಯಕ, ನಿಂಗಣ್ಣ ಪೂಜಾರಿ, ದೈಹಿಕ ಶಿಕ್ಷಕರು, ಪೊಲೀಸ್ ಸಿಬ್ಬಂದಿಗಳು, ಗೃಹ ರಕ್ಷಕ ದಳದ ಸಿಬದಿಗಳು, ಕ್ರೀಡಾಪಟಗಳು ಮ್ಯಾರಾಥಾನ್ ಓಟದಲ್ಲಿ ಭಾಗವಹಿಸಿದ್ದರು. ಮ್ಯಾರಥಾನ್ ವಿಜೇತರಿಗೆ ನಗದು ಬಹುಮಾನ ವಿತರಿಸಲಾಯಿತು.