ಹನೂರು (
ಚಾಮರಾಜನಗರ): ಆಕ್ಸಿಜನ್ ದುರಂತದಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಕಲ್ಪಿಸುವಂತೆ ಹೈಕೋರ್ಟ್ ಹೇಳಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕ್ರಮ ಕೈಗೊಳ್ಳಲಿದ್ದಾರೆ ಮತ್ತು ಮುಂದಿನ ವಿಚಾರಣೆಯ ದಿನಾಂಕದ ಒಳಗೆ ಸರ್ಕಾರದ ನಿಲುವು ಏನೆಂಬುದನ್ನು ತಿಳಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಹನೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರಂತ ಪ್ರಕಣದ ತನಿಖೆ ಹೈಕೋರ್ಟ್ ನಲ್ಲಿದ್ದು ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ. ಈ ಪ್ರಕರಣದ ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವ ಸಂಬಂಧ ಹೈಕೋರ್ಟ್ ಸೂಚಿಸಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮ ಕೈಗೊಳ್ಳಲಿದ್ದಾರೆ. ಮತ್ತು ಪ್ರಕರಣದಲ್ಲಿ ಅಧಿಕಾರಿಗಳ ಲೋಪದ ಸಂಬಂಧ ಹೈಕೋರ್ಟ್ ಮುಂದಿನ ವಿಚಾರಣೆ ಮತ್ತು ಆದೇಶದ ನಿರೀಕ್ಷೆಯಲ್ಲಿದ್ದೇವೆ ಎಂದರು.
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕು ಕಡಿಮೆಯಾಗಲಿದ್ದು ಬಳಿಕ ಪರೀಕ್ಷೆ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿ ಊಹಾಪೋಹ : ಸುರೇಶ್ ಕುಮಾರ್ ಪ್ರತಿಕ್ರಿಯೆ
ಕೋವಿಡ್ ಸ್ವಾಬ್ ಪರೀಕ್ಷೆ ಕಡಿಮೆ ಮಾಡುತ್ತಿರುವ ಸಂಬಂಧ ಮಾತನಾಡಿ ಕೋವಿಡ್ ಸೋಂಕಿತರ ಅಂಕಿ ಸಂಖ್ಯೆಯನ್ನು ಕಡಿಮೆ ಮಾಡುವುದು ಸರ್ಕಾರದ ಉದ್ದೇಶವಲ್ಲ. ಕೋವಿಡ್ ಗುಣ ಲಕ್ಷಣವಿರುವವರನ್ನು ಮತ್ತು ಅವರ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸುತ್ತಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರು ಮತ್ತು ಮರಣ ಹೊಂದುವವರ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎಂಬುದು ನಮ್ಮ ಉದ್ದೇಶ ಎಂದು ತಿಳಿಸಿದರು.
ಲಾಕ್‌ಡೌನ್ ವಿಸ್ತರಣೆ ಸಂಬಂಧ ಮಾತನಾಡಿ ಇನ್ನೂ ಕಾಲಾವಕಾಶವಿದ್ದು ಲಾಕ್‌ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಶಾಸಕ ಆರ್.ನರೇಂದ್ರ ಇನ್ನಿತರರು ಹಾಜರಿದ್ದರು.