ಹುಬ್ಬಳ್ಳಿ: 1 ರಿಂದ 5 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಆರಂಭಿಸಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಮಾ.1 ರಿಂದ ಶಾಲೆಗಳು ಆರಂಭವಾಗುತ್ತವೆ ಎನ್ನುವ ನಿರೀಕ್ಷೆಯಿತ್ತು, ಆದರೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಆರಂಭ ಸದ್ಯಕ್ಕಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಐದು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸರಕಾರ ಆತಂಕ ವ್ಯಕ್ತಪಡಿಸಿದೆ. ಇದರಲ್ಲಿ ಕರ್ನಾಟಕವೂ ಒಂದಾಗಿದೆ. ಮೇಲಾಗಿ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಿನ ಪ್ರಮಾಣದಲ್ಲಿದೆ. ಹೀಗಾಗಿ ಶಾಲೆ ಆರಂಭಿಸಲು ಸಾಧ್ಯವಾಗಿಲ್ಲ. ಇನ್ನೊಂದು ವಾರದಲ್ಲಿ ತಜ್ಞರ ಜೊತೆ ಸಮಾಲೋಚನೆ ನಡೆಸುತ್ತೇವೆ. ಆರೋಗ್ಯ ಇಲಾಖೆ ಸಲಹೆ ಹಾಗೂ ಅವರ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಮಂಗಳೂರು ಪಾಲಿಕೆ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆ
ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳು ಆರಂಭ ಮಾಡುವುದು ಸರಿಯಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಆರೋಗ್ಯಕ್ಕೂ ಸರಕಾರ ಹೆಚ್ಚಿನ ಕಾಳಜಿ ಹೊಂದಿದೆ. ಯಾವ ಶಾಲೆಗಳು ಆರಂಭವಾಗಿವೆ ಎಂಬುದರ ಕುರಿತು ನಿರ್ದಿಷ್ಟ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗಿದೆ. ಯಾವ ರೀತಿ ಅನುಷ್ಠಾನ ಮಾಡಬೇಕು ಎನ್ನುವ ಕುರಿತು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ ನೇತೃತ್ವದ ಕಾರ್ಯಪಡೆ ವರದಿ ನೀಡಿದೆ. ಈ ವರದಿ ಅಧ್ಯಯನ ಮಾಡಲಾಗುತ್ತಿದೆ ಎಂದು ತಿಳಿಸಿದರು.