Advertisement

ರಮೇಶ್‌ ಮನವೊಲಿಕೆಗೆ ಪ್ರಯತ್ನಿಸಿದ ಸುರೇಶ್‌

06:35 AM Sep 06, 2018 | Team Udayavani |

ಬೆಂಗಳೂರು: ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಮೂಗು ತೂರಿಸಿದರೆ ತಮ್ಮ ದಾರಿ ತಾವು ನೋಡಿಕೊಳ್ಳುವ ಎಚ್ಚರಿಕೆ ನೀಡಿರುವ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಸಂಸದ ಹಾಗೂ ಶಿವಕುಮಾರ್‌ ಸಹೋದರ ಡಿ.ಕೆ. ಸುರೇಶ್‌, ರಮೇಶ್‌ ಜಾರಕಿಹೊಳಿ ಮನವೊಲಿಕೆ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಯಾವುದೇ ಕಾರಣಕ್ಕೂ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಈ ಬಗ್ಗೆ ಯಾವುದೇ ರೀತಿಯ ಗೊಂದಲ ಸೃಷ್ಟಿಯಾಗುವುದು ಬೇಡ ಎಂದು ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.

ಬೆಳಗಾವಿ ಪಿಎಲ್‌ಡಿ ಬ್ಯಾಂಕಿನ ಚುನಾವಣೆ ಸಂದರ್ಭದಲ್ಲಿ ರಮೇಶ್‌ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಲಕ್ಷ್ಮೀ ಹೆಬ್ಟಾಳ್ಕರ್‌ ಅವರು ಡಿ.ಕೆ. ಶಿವಕುಮಾರ್‌ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿದ್ದು, ಅವರು ತಮ್ಮ ವಿರುದ್ಧ ತಿರುಗಿ ಬೀಳಲು ಶಿವಕುಮಾರ್‌ ಅವರೇ ಕಾರಣ ಎಂದು ರಮೇಶ್‌ ಜಾರಕಿಹೊಳಿ ಭಾವಿಸಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ಸಹೋದರರು ಡಿ.ಕೆ.ಶಿವಕುಮಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಮ್ಮಿಶ್ರ ಸರ್ಕಾರಕ್ಕೂ ಕಂಟಕವಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರಿಂದ ಎಚ್ಚೆತ್ತುಕೊಂಡ ಡಿ.ಕೆ.ಶಿವಕುಮಾರ್‌, ಸಹೋದರನ ಮೂಲಕ ರಮೇಶ್‌ ಜಾರಕಿಹೊಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ತಮ್ಮ ಸಹೋದರ ಯಾವುದೇ ರೀತಿಯ ಹಸ್ತಕ್ಷೇಪ ಮಾಡದಿದ್ದರೂ ಅನಗತ್ಯವಾಗಿ ಗೊಂದಲ ಸೃಷ್ಟಿಸಲಾಗುತ್ತಿದೆ. ತಾವು ಆತುರದ ನಿರ್ಧಾರ ತೆಗೆದುಕೊಳ್ಳುವುದರಿಂದ ಸರ್ಕಾರಕ್ಕೆ ಸಮಸ್ಯೆಯಾಗಲಿದೆ. ಯಾವುದೇ ರೀತಿಯ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಡಿ.ಕೆ.ಸುರೇಶ್‌ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next