ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಬರಲು ಇನ್ನೂ ಮೂರು ದಿನ ಬಾಕಿ ಇರುವಾಗಲೇ ಚುನಾವಣೆಯ ಮತಗಟ್ಟೆ ಸಮೀಕ್ಷೆ ಹೊರ ಬಂದಿದ್ದು, ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ನಿರೀಕ್ಷಿತ ಮಟ್ಟದಲ್ಲಿ ಗೆಲ್ಲುವುದಿಲ್ಲ ಎಂಬ ವರದಿಯಿಂದ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಒಂದು ರೀತಿ ಮಂಕು ಕವಿದಂತಾಗಿದೆ.
ಉಪ ಮುಖ್ಯಮಂತ್ರಿ ಪರಮೇಶ್ವರ್ ಒಂದು ಹೆಜ್ಜೆ ಮುಂದೆ ಹೋಗಿ, ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಸಮೀಕ್ಷೆಗಳ ಫಲಿತಾಂಶವನ್ನು ಪರೋಕ್ಷವಾಗಿ ಒಪ್ಪಿಕೊಂಡಂತೆ ಆಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿದ್ದರೆ ದಿನದಲ್ಲಿ ಒಂದು ಬಾರಿಯಾದರೂ ಪಕ್ಷದ ಕಚೇರಿಗೆ ಆಗಮಿಸಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಸೋಮವಾರ ಪಕ್ಷದ ಕಚೇರಿಯ ಕಡೆಗೂ ಆಗಮಿಸದೇ ದೂರ ಉಳಿದರು. ಮತಗಟ್ಟೆ ಸಮೀಕ್ಷೆಗಳ ಫಲಿತಾಂಶವೇ ನಿಜವಾದರೆ ಮುಂದೇನು ಎಂಬ ಚಿಂತೆಯಲ್ಲಿದ್ದಾರೆ ಎನ್ನಲಾಗಿದೆ.
Advertisement
ರಾಜ್ಯದಲ್ಲಿ ಮೈತ್ರಿ ಪಕ್ಷಗಳು ಎರಡಂಕಿ ದಾಟುವುದಿಲ್ಲ ಎಂದು ಹೇಳಿರುವುದು ರಾಜ್ಯ ಕಾಂಗ್ರೆಸ್ ನಾಯಕರನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. ಉಪ ಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮೀಕ್ಷೆಗಳ ಫಲಿತಾಂಶಗಳನ್ನು ಅಲ್ಲಗಳೆಯುವ ಪ್ರಯತ್ನ ನಡೆಸಿದ್ದರೂ, ಅವರಿಗೂ ಅಂದುಕೊಂಡಷ್ಟು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿಲ್ಲ ಎಂದು ಹೇಳಲಾಗಿದೆ.
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮೌನ
ಚುನಾವಣೆ ಸಂದರ್ಭದಲ್ಲಿ ಪ್ರತಿ ದಿನವೂ ಭಾಷಣದಲ್ಲಿ ಹಾಗೂ ಟ್ವೀಟ್ ಮೂಲಕ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮೌನ ವಹಿಸಿದ್ದಾರೆ. ಮೇ 18 ರಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸಭೆಯ ನಂತರ ಯಾವುದೇ ಬೆಳವಣಿಗೆಗಳ ಬಗ್ಗೆಯೂ ಟ್ವೀಟ್ ಮಾಡದೆ ಮೌನ ವಹಿಸಿದ್ದಾರೆ.
ಅಲ್ಲದೇ ಚುನಾವಣಾ ಮತಗಟ್ಟೆ ಫಲಿತಾಂಶದ ಬಗ್ಗೆಯೂ ಯಾವುದೇ ಪ್ರತಿಕ್ರಿಯೆ ನೀಡದೆ ಅಂತರ ಕಾಯ್ದುಕೊಂಡಿದ್ದಾರೆ. ಲೋಕಸಭೆ ಚುನಾವಣೆಯ ಎಲ್ಲ ಹಂತದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು ಮೈತ್ರಿ ಪಕ್ಷಗಳ ನಡುವೆ ಗೊಂದಲ ಉಂಟಾದಾಗಲೆಲ್ಲ ತೇಪೆ ಹಚ್ಚುವ ಪ್ರಯತ್ನ ನಡೆಸುತ್ತಿದ್ದ ಸಚಿವ ಡಿ.ಕೆ. ಶಿವಕುಮಾರ್, ಫಲಿತಾಂಶಗಳ ಗೊಂದಲದ ಗೊಡವೆಯೇ ಬೇಡ ಎಂದು ಒಂದು ವಾರ ಕುಟುಂಬ ಸಮೇತ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಮೇ 23 ರ ಫಲಿತಾಂಶದ ಬಗ್ಗೆ ನಿರೀಕ್ಷೆಗಳನ್ನು ಇಟ್ಟುಕೊಳ್ಳುವ ಬದಲು ನಾಯಕರಿಗೂ ಗೆದ್ದೇ ಗೆಲ್ಲುತ್ತೇವೆ ಎಂಬ ಭರವಸೆ ಇದ್ದಂತಿಲ್ಲ ಎಂದು ಹೇಳಲಾಗಿದೆ.
Related Articles
Advertisement