ನವದೆಹಲಿ: ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ನವದೆಹಲಿಯ ಲೋಧಿ ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಬುಧವಾರ ಸಂಜೆ ನಡೆಯಿತು.
ಲೋಧಿ ಚಿತಾಗಾರದಲ್ಲಿ ಪುತ್ರಿ ಬಾನ್ಸುರಿ ಸ್ವರಾಜ್ ಅಂತಿಮ ವಿಧಾನಗಳನ್ನು ನೆರವೇರಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ಮುಖಂಡರಾದ ಅಮಿತ್ ಶಾ, ಜೆಪಿ ನಡ್ಡಾ, ರಾಜನಾಥ್ ಸಿಂಗ್ ಸುಷ್ಮಾ ಅವರ ಪಾರ್ಥೀವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ್ದರು.
ಬೆಳಗ್ಗೆ ನವದೆಹಲಿಯ ನಿವಾಸದಲ್ಲಿ ಸುಷ್ಮಾ ಸ್ವರಾಜ್ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಮಧ್ಯಾಹ್ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರು, ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದರು. ಬಳಿಕ ಲೋಧಿ ಚಿತಾಗಾರಕ್ಕೆ ಪಾರ್ಥೀವ ಶರೀರವನ್ನು ತರಲಾಯಿತು ಎಂದು ವರದಿ ತಿಳಿಸಿದೆ.