ಬೆಂಗಳೂರು: ಒಳಮೀಸಲಾತಿ ಜಾರಿ ಆಗುವವರೆಗೆ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಬೇಕು ಎಂಬ ಪರಿಶಿಷ್ಟ ಜಾತಿಯ ಒತ್ತಡಕ್ಕೆ ಮಣಿದಿರುವ ರಾಜ್ಯ ಸರಕಾರ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸದಂತೆ ಆದೇಶಿಸಿದೆ.
ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವ ಅಧಿಕಾರವನ್ನು ಆಯಾ ರಾಜ್ಯ ಸರಕಾರಗಳಿಗೇ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದ ಬಳಿಕ ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು. ವೈಜ್ಞಾನಿಕ ದತ್ತಾಂಶಗಳನ್ನು ಆಧರಿಸಿ ಮೀಸಲು ವರ್ಗೀಕರಣಕ್ಕೆ ಮುಂದಾಗಿರುವ ಸರಕಾರ, ಮೀಸಲು ವರ್ಗೀಕರಣ ಆಗುವವರೆಗೆ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಎಂದು ಸೂಚಿಸಲಾಗಿದೆ.
ಈ ಬಗ್ಗೆ 2024ರ ಸೆ. 28ರಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಈ ದಿನಾಂಕದಿಂದಲೇ ಈ ಆದೇಶ ಜಾರಿಗೆ ಬರಲಿದೆ.ಇದಕ್ಕೂ ಮುನ್ನ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದರೆ, ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದ್ದರೆ ಅವುಗಳಿಗೆ ಬಾಧಕವಿಲ್ಲ ಎಂಬುದನ್ನೂ ಸ್ಪಷ್ಟಪಡಿಸಿದೆ.