ಮಲ್ಪೆ: ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್‌ನಲ್ಲಿದ್ದ 7 ಮಂದಿ ಮೀನುಗಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹೆಚ್ಚುವರಿ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿತರಿಸಿದರು.
ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಸಂದರ್ಭ ಪರಿಹಾರ ಚೆಕ್ ನ್ನು ಹಸ್ತಾಂತರಿಸಲಾಯಿತು.
2018ರ ಡಿಸೆಂಬರ್‌ನಲ್ಲಿ ಮಲ್ಪೆಯಿಂದ ಮಾಲಕ ಸಹಿತ ಏಳು ಜನರಿದ್ದ ಬೋಟ್ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿತ್ತು.
ಉನ್ನತ ಮಟ್ಟದಲ್ಲಿ ಶೋಧ ನಡೆಸಿ ಅದು ಮುಳುಗಡೆಯಾಗಿರುವುದಾಗಿ ವರದಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮೀನುಗಾರರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ. ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಅವರು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹೆಚ್ಚುವರಿ ಪರಿಹಾರ ಒದಗಿಸುವ ಬರಸವಸೆಯನ್ನು ನೀಡಿದ್ದು ಇಂದು ಮೀನುಗಾರರ ಕುಟುಂಬಕ್ಕೆ ಪರಿಹಾರ ಚೆಕ್ ಹಸ್ತಾಂತರಿಸಿದರು.
ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವ ಆರ್. ಅಶೋಕ್, ಶಾಸಕ ಕುಮಾರ್ ಬಂಗಾರಪ್ಪ ಉಪಸ್ಥಿತರಿದ್ದರು.