Advertisement

ಸ್ವಾಮಿನಾಥನ್‌ ವರದಿ ಜಾರಿಗೆ ಆಗ್ರಹ

09:23 PM Aug 03, 2019 | Team Udayavani |

ಚಿಕ್ಕಬಳ್ಳಾಪುರ: ಮಳೆ ಬೆಳೆ ಇಲ್ಲದೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ತಾವು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ನಿಗದಿಪಡಿಸುವ ಕೃಷಿ ತಜ್ಞ ಡಾ.ಸ್ವಾಮಿನಾಥನ್‌ ವರದಿಯನ್ನು ಕೂಡಲೇ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಿ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಶನಿವಾರ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

Advertisement

ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದ ಪ್ರಾಂತ ರೈತ ಸಂಘದ ಕಾರ್ಯಕರ್ತರು ತಮ್ಮ ವಿವಿಧ ಭೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳನ್ನು ಆಗ್ರಹಿಸಿ ಘೋಷಣೆ ಕೂಗಿದರು. ಕೇಂದ್ರ ಸರ್ಕಾರ ಕೂಡಲೇ ರೈತರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದರು.

ಎಸಿ ಕಚೇರಿಗೆ ಮುತ್ತಿಗೆ: ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದ ರೈತರು, ಅರ್ಧಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಿ ಗಮನ ಸೆಳೆದರು. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಸ್ವಾಮಿನಾಥನ್‌ ವರದಿ ಜಾರಿ ಬಗ್ಗೆ ಭರವಸೆ ನೀಡಿತ್ತು. ಆದರೆ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದರೂ ರೈತ ಸಮುದಾಯದ ಹಿತ ಕಾಯುವ ಸ್ವಾಮಿನಾಥನ್‌ ವರದಿ ಜಾರಿಗೆ ಬಗ್ಗೆ ಬಿಜೆಪಿ ಸರ್ಕಾರ ಚಕಾರ ಎತ್ತುತ್ತಿಲ್ಲ ಎಂದು ಪ್ರತಿಭಟನಾನಿರ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ದ ಕಿಡಿ: ಈ ಸಂದರ್ಭದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್‌.ಮುನಿಕೃಷ್ಣಪ್ಪ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಫ‌ಲವತ್ತಾದ ಕೃಷಿ ಭೂಮಿಯನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಲ ಮನ್ನಾಕ್ಕೆ ಆಗ್ರಹ:
ಸ್ವಾಮಿನಾಥನ್‌ ವರದಿ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ. ಕೂಡಲೇ ಸಂಸತ್‌ ಅಧಿವೇಶನದಲ್ಲಿ ರೈತರಿಗೆ ಋಣಮುಕ್ತ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಮಾಡಿರುವ ಎಲ್ಲಾ ತರದ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಕೇಂದ್ರ ಬಿಜೆಪಿ ಸರ್ಕಾರ ದೊಡ್ಡ ದೊಡ್ಡ ಶ್ರೀಮಂತರಿಗೆ, ಕಾರ್ಪೋರೆಟ್‌ ಕಂಪನಿಗಳ ಮೇಲೆ ತೋರುವ ಪ್ರೀತಿ, ಕಾಳಜಿ ದೇಶಕ್ಕೆ ಅನ್ನ ಕೊಡುವ ರೈತರ ಮೇಲೆ ತೋರಿಸುತ್ತಿಲ್ಲ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರ ಕೂಡ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕಳೆದ ವರ್ಷದ ಬೆಳೆ ವಿಮೆ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು. ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದರು.

Advertisement

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಬಾಗೇಪಲ್ಲಿ ಚೆನ್ನರಾಯಪ್ಪ, ಜಿಲ್ಲಾ ಸಮಿತಿ ಸದಸ್ಯರಾದ ಮಂಜುನಾಥರೆಡ್ಡಿ, ಶ್ರೀರಾಮಪ್ಪ, ಚಂದ್ರಶೇಖರರೆಡ್ಡಿ, ರಮಣ, ಮುನಿಯಪ್ಪ, ಜೈನಾಭಿ, ಅನುಸೂಯಮ್ಮ, ಶ್ರೀನಿವಾಸ್‌, ವೆಂಕಟೇಶಮ್ಮ, ನರಸಿಂಹಯ್ಯ, ವೆಂಕಟರಾಯಪ್ಪ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪ್ರಾಂತ ರೈತ ಸಂಘದ ಸದಸ್ಯರು ಭಾಗವಹಿಸಿದ್ದರು.

ಹಕ್ಕೋತ್ತಾಯಗಳಿಗೆ ಆಗ್ರಹಿಸಿ ಎಸಿಗೆ ಮನವಿ: ಪ್ರತಿಭಟನಾನಿರತ ಪ್ರಾಂತ ರೈತ ಸಂಘದ ಕಾರ್ಯಕರ್ತರು, ಪ್ರಮುಖವಾಗಿ ರೈತರು ಹಾಗೂ ರೈತಾಪಿ ಆಧಾರಿತ ಕೃಷಿ ಸಂರಕ್ಷಿಸಲು ಸಂಪತ್ತು ಬೆಂಬಲ ಬೆಲೆ ಕಾಯ್ದೆಯನ್ನು ಮತ್ತು ಋಣಮುಕ್ತ ಕಾಯ್ದೆಯನ್ನು ಸಂಸತ್‌ ಅಧಿವೇಶದಲ್ಲಿ ಜಾರಿಗೊಳಿಸಬೇಕು, ಉದ್ಯೋಗ ಖಾತ್ರಿ ಯೋಜನೆಯಡಿ ಕುಟುಂಬದ ಎಲ್ಲಾ ಸದಸ್ಯರಿಗೆ ಕನಿಷ್ಠ ವಾರ್ಷಿಕ 200 ದಿನ ಉದ್ಯೋಗ ಒದಗಿಸಬೇಕು,

ಎಲ್ಲಾ ಬಡ ಹಾಗೂ ಮಧ್ಯಮ ರೈತಾಪಿ ಜನಕ್ಕೆ ಮಾಸಿಕ 5,000 ರೂ. ಪಿಂಚಣಿ ಕೊಡಬೇಕು, ಡಾ.ಸ್ವಾಮಿನಾಥನ್‌ ವರದಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ ಮುಖಾಂತರ ಕೇಂದ್ರ ಸರ್ಕಾರಕ್ಕೆ ಸೂಚಿಸುವಂತೆ ರಾಷ್ಟ್ರಪತಿಗಳಿಗೆ ರೈತ ಸಂಘದ ಮುಖಂಡರು ಮನವಿ ಕಳುಹಿಸಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next