ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಸುಮಾರು ಒಂದೂವರೆ ತಿಂಗಳು ಕಳೆದಿದ್ದು, ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಶೇ.30ರಷ್ಟು ಪಾಠಗಳು ಮುಗಿದಿವೆ. ಆದರೂ ವಿದ್ಯಾರ್ಥಿಗಳಿಗೆ “ಟ್ಯಾಬ್’ ತಲುಪಿಲ್ಲ.
ಟ್ಯಾಬ್ ವಿತರಿಸುವ ಸಂಬಂಧ ಉನ್ನತ ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ನೀಡಿದ ಬಳಿಕ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು 300 ಕೋಟಿ ರೂ. ಅನುದಾನ ಬೇಕಾಗುವುದರಿಂದ ಆರ್ಥಿಕ ಇಲಾಖೆ ಅನುಮತಿ ಪಡೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆ ಆರಂಭವಾಗುವುದು ಸ್ವಲ್ಪ ವಿಳಂಬ ವಾಗಬಹುದು ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ರಾಜ್ಯದ ಸರಕಾರಿ ಪದವಿ ಕಾಲೇಜು ಗಳಲ್ಲಿ ಕಲಿಯುವ ಸಾಮಾನ್ಯ ಪದವಿ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸಹಿತ ಎಲ್ಲ ಪದವಿ ವಿದ್ಯಾರ್ಥಿಗಳಿಗೂ ಉನ್ನತ ಶಿಕ್ಷಣ ಇಲಾಖೆ ಉಚಿತವಾಗಿ ಟ್ಯಾಬ್ ವಿತರಿಸಲಿದೆ. ಸುಮಾರು 3 ಲಕ್ಷಕ್ಕೂ ಅಧಿಕ ಮಂದಿ ಫಲಾನು ಭವಿಗಳಾಗಿರುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಲ್ಯಾಪ್‌ಟಾಪ್ ವಿತರಿಸುವ ಯೋಜನೆಯನ್ನು ಜಾರಿಗೊಳಿಸಲಾಯಿತು. ಅನಂತರ ಕೊರೊನಾ ಅವಧಿಯಲ್ಲಿ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಅದನ್ನು ಮತ್ತೆ ಪುನರಾರಂಭಿಸಿದ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಲ್ಯಾಪ್‌ಟಾಪ್ ಬದಲಿಗೆ “ಟ್ಯಾಬ್’ ವಿತರಿಸುತ್ತಿದೆ.
ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರಕಾರ ಅನುಮತಿ ನೀಡಿದ ಬಳಿಕ ಪ್ರಕ್ರಿಯೆ ಆರಂಭಿಸಲಾಗುತ್ತದೆ.
– ಪಿ. ಪ್ರದೀಪ್,
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ