Advertisement

ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ

01:47 AM Jul 31, 2019 | mahesh |

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಂಗಳವಾರ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಮಳೆ ಹಾನಿ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಸರಾಸರಿ ಶೇ.18ರಷ್ಟು ಮಳೆ ಕೊರತೆಯಾಗಿದೆ. ಮಲೆನಾಡು, ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಕೊರತೆಯಾಗಿದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹ ಶೇ.47ರಷ್ಟಿದ್ದು, 158 ತಾಲೂಕುಗಳಲ್ಲಿ ಅಂತರ್ಜಲ ಕುಸಿದಿದೆ.

ಈವರೆಗೆ ಮುಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಶೇ.53ರಷ್ಟಿದೆ. ಕೂಡಲೇ ಅಧಿಕಾರಿಗಳು ರಾಜ್ಯದ ರೈತರು, ಜನ ಸಾಮಾನ್ಯರ ನೆರವಿಗೆ ಧಾವಿಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಜನರಲ್ಲಿ ವಿಶ್ವಾಸ ಮೂಡಿಸಬೇಕು. ಅಂತರ್ಜಲ ಮರುಪೂರಣಕ್ಕೆ ಆದ್ಯತೆ ನೀಡುವ ಜತೆಗೆ ಬೆಳೆವಿಮೆಯನ್ನು ಕಡ್ಡಾಯವಾಗಿ ಮಾಡಿಸುವಂತೆ ಮನವೊಲಿಸಬೇಕು ಎಂದು ಸೂಚಿಸಿದರು.

ಆ. 2ರಂದು ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದು, ರಾಜ್ಯದ ವಸ್ತುಸ್ಥಿತಿಯ ಮಾಹಿತಿ ಪಡೆದು ಬರ ಪರಿಸ್ಥಿತಿಯ ಗಂಭೀರತೆಯನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಕೊಡಲಾಗುವುದು. ಸದ್ಯ ಬಾಕಿ ಇರುವ ಕಳೆದ ಹಿಂಗಾರು ಹಂಗಾಮಿನ ಎನ್‌ಡಿಆರ್‌ಎಫ್ ಪರಿಹಾರ, ಉದ್ಯೋಗ ಖಾತರಿ ಯೋಜನೆಯ ಬಾಕಿ ಅನುದಾನ ಹಾಗೂ ಇತರ ಅಗತ್ಯ ಅನುದಾನ ಬಿಡುಗಡೆಗೆ ಪ್ರಧಾನಿ ಹಾಗೂ ಕೇಂದ್ರ ಸಚಿವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿದ್ದ ಅಧಿಕಾರಿಗಳು ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ 3,067 ಹಳ್ಳಿಗಳಿಗೆ ಟ್ಯಾಂಕರ್‌ ಇಲ್ಲವೇ ಖಾಸಗಿ ಕೊಳವೆಬಾವಿಗಳಿಂದ ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ 12 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದ್ದು, 27 ಗೋಶಾಲೆಗಳನ್ನು ಸ್ಥಾಪಿಸಲಾಗಿದೆ. 11 ಮೇವು ಬ್ಯಾಂಕ್‌ ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ 547.6 ಕೋಟಿ ರೂ.ಅನುದಾನ ಲಭ್ಯವಿದ್ದು, ಹಣಕಾಸಿನ ಯಾವುದೇ ಕೊರತೆ ಇಲ್ಲ. ಜತೆಗೆ, ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯದಲ್ಲಿ ಈವರೆಗೆ ಗುರಿ ಮೀರಿದ ಸಾಧನೆಯಾಗಿದೆ ಎಂದು ಮಾಹಿತಿ ನೀಡಿದರು.

Advertisement

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾ ಯಣ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎನ್‌.ಎಸ್‌. ಪ್ರಸಾದ್‌ ಇದ್ದರು.

ಆ.2ರಂದು ಡೀಸಿ, ಸಿಇಒಗಳ ಸಭೆ
ಆ.2ರಂದು ಎಲ್ಲಾ ಜಿಲ್ಲಾಧಿಕಾರಿಗಳು, ಸಿಇಒ ಸಭೆ ಕರೆದು ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕೃಷಿ ಕಾರ್ಮಿಕರ ನಿರುದ್ಯೋಗ ಸಮಸ್ಯೆ ಸೇರಿದಂತೆ ಜನ ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಇಡೀ ದಿನ ಚರ್ಚಿಸಿ ಪರಿಹಾರ ಕಾರ್ಯಗಳಿಗೆ ನಿರ್ದಿಷ್ಟ ಸ್ವರೂಪ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಜನ ಸಂಕಷ್ಟದಲ್ಲಿದ್ದಾರೆ.

ಮಲೆನಾಡು ಸೇರಿದಂತೆ 18 ಜಿಲ್ಲೆಗಳಲ್ಲಿ ಮಳೆಯಾಗಿಲ್ಲ. ಕಳೆದ ವರ್ಷ ಇದೇ ಸಂದರ್ಭಕ್ಕೆ ಹೋಲಿಸಿದರೆ ಜಲಾಶಯಗಳಲ್ಲಿ ನೀರಿನ ಸಂಗ್ರಹ ಶೇ.30ಕ್ಕಿಂತಲೂ ಕಡಿಮೆ ಇದೆ. 15 ದಿನದಲ್ಲಿ ಮಳೆಯಾಗಿ ಕೆರೆ, ಕಟ್ಟೆ, ಜಲಾಶಯ ತುಂಬಿದರೆ ಮಾತ್ರ ನೆಮ್ಮದಿಯ ನಿಟ್ಟುಸಿರು ಬಿಡಬಹುದು ಎಂದು ತಿಳಿಸಿದರು. ಮೋಡ ಬಿತ್ತನೆಗೆ ಕೇಂದ್ರ ಸರ್ಕಾರದ ಅನುಮತಿ ಸಿಕ್ಕಿದ್ದು, ಈಗಾಗಲೇ 3-4 ಜಿಲ್ಲೆಯಲ್ಲಿ ಶುರುವಾಗಿದೆ. ಮೋಡ ಬಿತ್ತನೆ ಕಾರ್ಯವನ್ನು ತೀವ್ರಗೊಳಿಸುವಂತೆ ಸೂಚಿಸಲಾಗಿದೆ.

ಆ.2ರಂದು ನಡೆಸಲಿರುವ ಜಿಲ್ಲಾಧಿಕಾರಿಗಳು, ಸಿಇಒ ಸಭೆಗೆ ಪೂರ್ವಭಾವಿಯಾಗಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆಯಲಾಗಿದೆ. ಇದರ ಆಧಾರದ ಮೇಲೆ ಆ.5, 6ರಂದು ದೆಹಲಿಗೆ ತೆರಳಿ ಪ್ರಧಾನಿ, ಕೇಂದ್ರ ಹಣಕಾಸು ಸಚಿವರು ಸೇರಿದಂತೆ ಹಲವು ಸಚಿವರನ್ನು ಭೇಟಿಯಾಗಿ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು, ಹೆಚ್ಚಿನ ಅನುದಾನಕ್ಕೆ ಮನವಿ ಮಾಡಲಾಗುವುದು. ಜಾನುವಾರು ಮೇವು, ಗೋಶಾಲೆ ಆರಂಭಿಸುವುದಕ್ಕೆ ಒತ್ತು ನೀಡಲಾಗುವುದು. ಆ.2ರ ಸಭೆಯ ಬಳಿಕ ಪರಿಹಾರ ಕಾರ್ಯಗಳಿಗೆ ಅಂತಿಮ ರೂಪ ಸಿಗಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next