Advertisement

ತಂಬಾಕು ಉತ್ಪನ್ನ ಅನಧಿಕೃತ ಮಾರಾಟಕ್ಕೆ ಕ್ರಮ ಕೈಗೊಳ್ಳಿ

04:44 PM May 12, 2019 | Team Udayavani |

ಹಾವೇರಿ: ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಹಾಗೂ ಅನಧಿಕೃತ ಮಾರಾಟ ಕಂಡುಬಂದಲ್ಲಿ ದಾಳಿ ನಡೆಸಿ ಸೂಕ್ತ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಕಾರಿ ಕೃಷ್ಣ ಭಾಜಪೇಯಿ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ನಿಷೇಧಿತ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಕೂಡಲೇ ದಂಡ ವಿಧಿಸಬೇಕು. 18 ವರ್ಷದೊಳಗಿನ ವ್ಯಕ್ತಿಗಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಶಿಕ್ಷಣ ಸಂಸ್ಥೆಗಳ 100 ಮೀಟರ್‌ ಅಂತರದ ಒಳಗೆ ತಂಬಾಕು ಉತ್ಪನ್ನಗಳ ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು. ‘ಧೂಮಪಾನ ನಿಷೇಧಿಸಲಾಗಿದೆ’ ಎಂಬ ನಾಮಫಲಕ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚನೆ ನೀಡಬೇಕು. ತಂಬಾಕು ಉತ್ಪನ್ನಗಳ ಅನಧಿಕೃತ ಮಾರಾಟ ಹಾಗೂ ಕಾನೂನು ಉಲ್ಲಂಘನೆ ಪ್ರಕರಣ ಮಾಹಿತಿ ನೀಡಲು ಹೊಸದೊಂದು ಟ್ವಿಟ್ಟರ್‌ ಖಾತೆ ರಚಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬೇಕರಿ ಇತರೆ ದಿನಸಿ ಅಂಗಡಿಗಳಿಗೆ ಸ್ಥಳೀಯ ನಗರಸಭೆ ಹಾಗೂ ಪುರಸಭೆಗಳಿಂದ ಪರವಾನಗಿ ಪಡೆದು, ತಂಬಾಕು ವಸ್ತುಗಳ ಮಾರಾಟ ಕಂಡುಬಂದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಬೇಕು. ಕಾಲಕಾಲಕ್ಕೆ ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿವಿಧೆಡೆ ದಾಳಿ: ಕಾರ್ಯಕ್ರಮ ಜಿಲ್ಲಾ ಸಲಹೆಗಾರ ಡಾ| ಸಂತೋಷ್‌ ಅವರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ 2018-19ನೇ ಸಾಲಿನಿಂದ ಜಿಲ್ಲೆಯಲ್ಲಿ ಜಾರಿಗೆ ಬಂದಿದ್ದು, ಕಳೆದ ಜೂನ್‌ ತಿಂಗಳಿಂದ ಈ ವರೆಗೆ 9 ಕಡೆ ದಾಳಿ ನಡೆಸಿ 70 ಪ್ರಕರಣಗಳನ್ನು ದಾಖಲಿಸಿ 24.500 ರೂ. ದಂಡ ವಸೂಲಿ ಮಾಡಲಾಗಿದೆ. 65 ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 29 ಕಡೆಗಳಲ್ಲಿ ಸಮುದಾಯ ಗುಂಪು ಚರ್ಚೆ ನಡೆಸಲಾಗಿದೆ ಹಾಗೂ ವಿವಿಧ ಕಾರ್ಮಿಕರಿಗೆ ಆರು ಕಡೆಗಳಲ್ಲಿ ತರಬೇತಿ ನೀಡಲಾಗಿದೆ. 800 ಜನರಿಗೆ ಜಿಲ್ಲಾ ಮಟ್ಟದಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

Advertisement

ಶಿಗ್ಗಾವಿ, ಹಾನಗಲ್ಲ ಹಾಗೂ ಹಾವೇರಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಲ್ಲಿ ಅನಧಿಕೃತವಾಗಿ ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ| ಜಗದೀಶ ಮಾತನಾಡಿ, ನಗರದ ಕೇಂದ್ರಿಯ ವಿದ್ಯಾಲಯ ಹಾಗೂ ತರಳಬಾಳು ಶಾಲೆಯನ್ನು ತಂಬಾಕು ಮುಕ್ತ ಶಾಲೆ ಎಂದು ಗುರುತಿಸಲಾಗಿದೆ. ತಂಬಾಕು ರಹಿತ ಶಾಲೆಗಳ ಮಾಹಿತಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಕೋರಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಸಭೆಗಳಲ್ಲಿ ಸಹ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುವುದು ಹಾಗೂ ಮೇ 31 ರಂದು ತಂಬಾಕು ರಹಿತ ದಿನಾಚರಣೆ ಆಚರಿಸಲಾಗುತ್ತಿದ್ದು, ಅಂದು ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಚ್.ಎಸ್‌.ರಾಘವೇಂದ್ರಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ಡಾ| ಪ್ರಭಾಕರ ಕುಂದೂರ ಸೇರಿದಂತೆ ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು, ನಗರಸಭೆ, ಪುರಸಭೆ ಅಧಿಕಾರಿಗಳು, ಆಹಾರ ಸುರಕ್ಷತಾ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next