Advertisement

ನೀರಿನ ಸಮಸ್ಯೆ ಉಲ್ಬಣಿಸದಂತೆ ಕ್ರಮ ಕೈಗೊಳ್ಳಿ

03:05 PM Mar 10, 2020 | Suhan S |

ಶಿವಮೊಗ್ಗ: ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಕಾಲ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಪ್ರಸ್ತುತ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಪರಿಸ್ಥಿತಿಯಿಲ್ಲ. ಆದರೂ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಬಹುದಾದ 316 ಗ್ರಾಮಗಳನ್ನು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ತಾತ್ಕಾಲಿಕ ಕಾಮಗಾರಿ ಕೈಗೊಳ್ಳುವ ಬದಲು ನೀರಿನ ಮೂಲ ಗುರುತಿಸಿ ಪೈಪ್‌ಲೈನ್‌ ಅಳವಡಿಕೆಯಂತಹ ಶಾಶ್ವತ ಕಾಮಗಾರಿ ಕೈಗೊಳ್ಳಲು ಆದ್ಯತೆ ನೀಡಬೇಕು ಎಂದರು.

ಗ್ರಾಮೀಣ ನೀರು ಪೂರೈಕೆ ಇಲಾಖೆ ಸೇರಿದಂತೆ ಎಲ್ಲಾ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಪ್ರಸ್ತುತ ಕಾಮಗಾರಿ ಪೂರ್ಣಗೊಂಡು ಪ್ರಾಯೋಗಿಕ ನೀರು ಪೂರೈಕೆ ನಡೆಯುತ್ತಿರುವ ಎಲ್ಲಾ 3 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಆದಷ್ಟು ಬೇಗನೆ ಕಾರ್ಯಾರಂಭ ಮಾಡಬೇಕು ಎಂದರು.

ಟ್ಯಾಂಕರ್‌ ಸಾಫ್ಟ್‌ವೇರ್‌: ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಟ್ಯಾಂಕರ್‌ ಸಾಫ್ಟ್‌ವೇರ್‌ ರೂಪಿಸಿದ್ದು, ಈ ಕುರಿತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಮಾಹಿತಿ ಒದಗಿಸಬೇಕು. ಉಪವಿಭಾಗಾಧಿಕಾರಿ ಮಟ್ಟದಲ್ಲಿ ಟ್ಯಾಂಕರ್‌ ನೀರು ಸರಬರಾಜು ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಕಳೆದ ವರ್ಷದ ಕುಡಿಯುವ ನೀರಿನ ಕಾಮಗಾರಿಗಳ ಬಿಲ್ಲು ಪಾವತಿಗೆ ಬಾಕಿ ಇದ್ದರೆ ಅದನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಅನುಮತಿ ಇಲ್ಲದೆ ನೀರು ಬಿಡಬಾರದು: ಜಿಲ್ಲೆಯ ಪ್ರಮುಖ ಜಲಾಶಯಗಳಾದ ಗಾಜನೂರು, ಭದ್ರಾ, ಅಂಜನಾಪುರ, ಅಂಬ್ಲಿಗೋಳ ಜಲಾಶಯಗಳಲ್ಲಿ ಜೂನ್‌ವರೆಗೆ ಕುಡಿಯುವ ನೀರು ಪೂರೈಕೆಗೆ ನೀರು ಲಭ್ಯವಿದೆ. ಆದರೆ ಈಗಾಗಲೇ ನಿಗದಿಯಾಗಿರುವ ನೀರನ್ನು ಬಿಟ್ಟು, ಬೇರೆ ಯಾವುದೇ ಕಾರಣಕ್ಕೂ ನೀರನ್ನು ಜಿಲ್ಲಾಧಿಕಾರಿ ಅನುಮತಿ ಪಡೆಯದೇ ಬಿಡಬಾರದು. ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ವಹಿಸಬೇಕು. ನೀರಿನ ಲಭ್ಯತೆ ಬಗ್ಗೆ ಪ್ರತಿ 15ದಿನಗಳಿಗೊಮ್ಮೆ ವರದಿ ಸಲ್ಲಿಸಬೇಕು ಎಂದರು.

Advertisement

ಜಿಪಂ ಸಿಇಒ ಎಂ.ಎಲ್‌.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ, ಉಪ ವಿಭಾಗೀಯ ಆಯುಕ್ತರಾದ ನಾಗರಾಜ್‌, ಪ್ರಕಾಶ್‌ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next