ಬೀದರ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಗುರಿಯನ್ನು ನವೆಂಬರ್ ಒಳಗಾಗಿ ಸಾಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಪಂ ಸಿಬ್ಬಂದಿ, ಕಂದಾಯ ಇಲಾಖೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಪ್ರತಿ ಹಳ್ಳಿಯಲ್ಲಿಯೂ ಅಭಿಯಾನದ ಮಾದರಿಯಲ್ಲಿ ಲಸಿಕೆ ನೀಡಬೇಕು ಎಂದು ಪ್ರಕಟಣೆ ಮೂಲಕ ನಿರ್ದೇಶನ ನೀಡಿದ್ದಾರೆ.
ತಜ್ಞರು ಕೋವಿಡ್ 3ನೇ ಅಲೆಯ ಬಗ್ಗೆ ಎಚ್ಚರಿಕೆ ನೀಡಿರುವುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಬೀದರ ಜಿಲ್ಲೆಯಲ್ಲಿ ಈವರೆಗೆ ಮೊದಲ ಡೋಸ್ ಶೇ.73ರಷ್ಟು ಹಾಗೂ 2ನೇ ಡೋಸ್ ಶೇ.50 ಪ್ರಗತಿಯಾಗಿದೆ. ಗ್ರಾಮೀಣ ಭಾಗದಲ್ಲಿ ಲಸಿಕೆ ಬಗ್ಗೆ ಜನರಲ್ಲಿ ಇನ್ನು ಗೊಂದಲಗಳಿವೆ. ಲಸಿಕೆಯ ಮಹತ್ವದ ಬಗ್ಗೆ ಮನವರಿಕೆ ಮಾಡಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಜನತೆ ಸುಳ್ಳು ಸುದ್ದಿಗಳಿಗೆ ಕಿವಿಗೊಡದೇ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ.
ಕೋವಿಡ್ ಸೋಂಕು ತಡೆಗೆ ಲಸಿಕೆಯೇ ಸಂಜೀವಿನಿಯಾಗಿದೆ. ಜಿಲ್ಲೆಯಲ್ಲಿ ಲಸಿಕೆಗೆ ಕೊರತೆಯಿಲ್ಲ. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆದು ರೋಗ ನಿಯಂತ್ರಣಕ್ಕೆ ಸರ್ಕಾರದ ಕೈ ಜೋಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿಯವರು ಈ ವಿಷಯದಲ್ಲಿ ಬಹಳಷ್ಟು ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ದೇಶದಲ್ಲಿ ಈವರೆಗೆ 100 ಕೋಟಿ ಜನರು ಲಸಿಕೆ ಪಡೆದಿರುವುದು ದೊಡ್ಡ ಸಾಧನೆ. ಬೀದರ ಜಿಲ್ಲೆಯೂ ಲಸಿಕೆ ನೀಡುವಲ್ಲಿ ಮೊದಲ ಸ್ಥಾನದಲ್ಲಿರಬೇಕೆಂಬುದು ನನ್ನ ಆಶಯವಾಗಿದೆ. ಜಿಲ್ಲಾಧಿಕಾರಿಗಳು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಎಲ್ಲ ಅಧಿಕಾರಿಗಳು ಅವರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದ್ದು, ಅರ್ಹರೆಲ್ಲರೂ ವಿಳಂಬ ಮಾಡದೇ ಲಸಿಕೆ ಪಡೆಯಬೇಕು ಎಂದು ಜಿಲ್ಲೆಯ ಜನರಲ್ಲಿ ಸಚಿವರು ಮನವಿ ಮಾಡಿದ್ದಾರೆ.