Advertisement

ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮವಹಿಸಿ: ಸಚಿವ ಎಸ್.ಟಿ.ಸೋಮಶೇಖರ್

07:46 PM Jun 06, 2022 | Team Udayavani |

ಬೆಂಗಳೂರು: ರೈತರಿಗೆ ಬಿತ್ತನೆಬೀಜ, ರಸಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಅಗತ್ಯ ಪ್ರಮಾಣದ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

Advertisement

ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿತ್ತನೆಬೀಜ, ರಸಗೊಬ್ಬರ ಕೊರತೆ ಬಗ್ಗೆ ರೈತರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕು ಎಂದರು.

ಕೊಳಚೆ ನಿರ್ಮೂಲನಾ ಮಂಡಳಿಯಿಂದ ಬಡವರಿಗೆ ಹೊಸದಾಗಿ ಮನೆ ಕಟ್ಟಿಕೊಡುವುದಾಗಿ ಹೇಳಿ ಮೂರು ವರ್ಷವಾದರೂ ಇನ್ನೂ ಪೂರ್ಣಗೊಂಡಿಲ್ಲ. ಮನೆಯಿಲ್ಲದೆ ಜನ ರಸ್ತೆಯಲ್ಲಿ ವಾಸ ಮಾಡುವಂತಾಗಿದೆ. ಈ ಬಗ್ಗೆ ಯಾವ ಕ್ರಮಕೈಗೊಂಡಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ 357, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 503 ಮನೆಗಳ ನಿರ್ಮಾಣ ಮಾಡಲು ಮತ್ತೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಉತ್ತರಿಸಿದರು. ಇನ್ನೂ ಟೆಂಡರ್ ಕರೆಯುವುದರಲ್ಲೇ ಇದ್ದರೆ ಜನರಿಗೆ ಮನೆಗಳನ್ನು ನಿರ್ಮಿಸಿಕೊಡುವುದು ಯಾವಾಗ ಎಂದು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: 4 ದಿನ ಹಾವಿನ ಜೊತೆ ಅಜ್ಜಿ ವಾಸ! ಮೃತ ಪತಿಯೇ ಹಾವಿನ ರೂಪದಲ್ಲಿ ಬಂದಿದ್ದಾರೆಂದ ಅಜ್ಜಿ

Advertisement

ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ವಿವಿಧ ಜಾತಿಯ 1.35 ಲಕ್ಷ ಸಸಿಗಳನ್ನು ಬೆಳೆಸಲಾಗಿದೆ. ಮಳೆಗಾಲ ಆರಂಭವಾಗಿರುವುದರಿಂದ ರೈತರಿಗೆ ಸಸಿಗಳನ್ನು ವಿತರಣೆ ಮಾಡಲಾಗಿದೆ. ಸಸಿಗಳನ್ನು ನಿರ್ವಹಣೆ ಮಾಡುವ ರೈತರಿಗೆ ಸರ್ಕಾರದ ವತಿಯಿಂದ ನೀಡುವ ಪ್ರೋತ್ಸಾಹಧನವನ್ನು ಕೂಡ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದರು.

ಅಂಗನವಾಡಿಯಲ್ಲಿ ಬಿಸಿಯೂಟ ಆರಂಭ, ಶಾಲೆಗಳಿಗೆ ಪಠ್ಯಪುಸ್ತಕ ಪೂರೈಕೆ, ಹಾಸ್ಟೆಲ್ ನಿರ್ವಹಣೆ, ಪಡಿತರ ವಿತರಣೆ, ರಸ್ತೆ ನಿರ್ಮಾಣ ಕಾಮಗಾರಿ ಸೇರಿದಂತೆ ಹಲವು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನಾಗವೇಣಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next