Advertisement

ಬಾಲ್ಯ ವಿವಾಹ ತಡೆಗೆ ಕ್ರಮ ಕೈಗೊಳ್ಳಿ: ಡಿಸಿ

03:03 PM May 17, 2019 | Suhan S |

ಬೆಳಗಾವಿ: ಬಾಲ್ಯವಿವಾಹ ತಡೆಗೆ ಸಂಬಂಧಿಸಿದಂತೆ ನಿರಂತರವಾಗಿ ಅರಿವು ಕಾರ್ಯಕ್ರಮಗಳನ್ನು ನಡೆಸುವುದಲ್ಲದೇ ಬಾಲ್ಯ ವಿವಾಹಗಳು ಹೆಚ್ಚಿನ ಪ್ರಮಾಣದಲ್ಲಿ ನಡೆಯುವ ಸಮಾಜಗಳ ಮುಖಂಡರ ಜೊತೆಗೆ ಪ್ರತ್ಯೇಕ ಸಭೆ ನಡೆಸುವ ಮೂಲಕ ಬಾಲ್ಯವಿವಾಹ ತಡೆಗಟ್ಟಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್‌. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಬಾಲ್ಯ ವಿವಾಹಗಳನ್ನು ತಡೆಯುವುದು, ಗೆಳತಿ ವಿಶೇಷ ಚಿಕಿತ್ಸಾ ಘಟಕ ಹಾಗೂ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ ಕುರಿತು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಯಬಾಗ ಹಾಗೂ ಅರಭಾವಿಯಲ್ಲಿ ನಿರ್ದಿಷ್ಟ ಸಮುದಾಯಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇದನ್ನು ತಡೆಗಟ್ಟಲು ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಡೆಸಬೇಕು ಎಂದರು. ಬಾಕಿ ಉಳಿದಿರುವ ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಆಪ್ತ ಸಮಾಲೋಚನೆ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಬೇಕು. ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಬಗೆಹರಿಸಲು ಸಂಬಂಧಿಸಿದವರಿಗೆ ಸಮಿತಿಯು ಆಪ್ತಸಮಾಲೋಚನೆಗೆ ಹಾಜರಾಗುವಂತೆ ಮೂರು ನೋಟಿಸ್‌ ನೀಡಬಹುದು. ಒಂದು ವೇಳೆ ಅವರು ಹಾಜರಾಗದಿದ್ದರೆ ಪ್ರಕರಣವನ್ನು ಪೊಲೀಸ್‌ ಇಲಾಖೆಗೆ ವರ್ಗಾಯಿಸಬಹುದು ಎಂದು ಹೇಳಿದರು.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಪೊಲೀಸ್‌ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅರ್ಹ ಫಲಾನುಭವಿಗಳನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗುರುತಿಸುವ ಕೆಲಸವಾಗಬೇಕು. ಆಧಾರ್‌ ಕಾರ್ಡ್‌ ಅಥವಾ ಇತ ದಾಖಲಾತಿ ಕೊರತೆ ಕಾರಣಕ್ಕೆ ಯವುದೇ ಅರ್ಹ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯುವಂತಾಗಬಾರದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿ ತೋರಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಆಸ್ಪತ್ರೆಯಲ್ಲಿರುವ ಗೆಳತಿ ವಿಶೇಷ ಚಿಕಿತ್ಸಾ ಘಟಕದ ಮೂಲಕ ಸಂತ್ರಸ್ತರಿಗೆ ನೀಡಲಾಗುತ್ತಿರುವ ವೈದ್ಯಕೀಯ, ಕಾನೂನು ಮತ್ತು ಆಪ್ತಸಮಾಲೋಚನೆ ಸೇವೆಯ ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಅತ್ಯಾಚಾರ ಅಥವಾ ಕೌಟುಂಬಿಕ ಕಲಹ ಪ್ರಕರಣಗಳು ವರದಿಯಾದಾಗ ಸಂಬಂಧಪಟ್ಟ ಅಧಿಕಾರಿಗಳು ನಿಯಮಾವಳಿ ಪ್ರಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Advertisement

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜೇಂದ್ರ ಬೇಕಲ್ ಅವರು ಬಾಲ್ಯವಿವಾಹ ತಡೆಗಟ್ಟುವಿಕೆ, ಗೆಳತಿ ವಿಶೇಷ ಚಿಕಿತ್ಸಾ ಘಟಕದ ಕಾರ್ಯನಿರ್ವಹಣೆ, ಸ್ಥೈರ್ಯ ನಿಧಿ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಅಪ್ಪಾಸಾಹೇಬ್‌ ನರಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭಾರತಿ ಶೆಟ್ಟರ್‌, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಉಪನಿರ್ದೇಶಕ ಗುರುನಾಥ ಕಡಬೂರ, ಆಶ್ರಯ ಫೌಂಡೇಶನ್‌ ಅಧ್ಯಕ್ಷ ನಾಗರತ್ನಾ ರಾಮಗೌಡರ, ಅಖೀಲಾ ಪಠಾಣ ಹಾಗೂ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next