ಚಿತ್ರದುರ್ಗ: ಜಿಲ್ಲೆಯಲ್ಲಿ 2020ರ ಜು. 1 ರಿಂದ ನ. 15 ರವರೆಗೆ 24 ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿ 26.30 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 2020ನೇ ಸಾಲಿನ 4ನೇ ತ್ತೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗೆ ಮಾಹಿತಿ ನೀಡಿದರು. ಪರಿಶಿಷ್ಟ ಜಾತಿಯ22 ಪ್ರಕರಣಗಳು, ಪರಿಶಿಷ್ಟ ವರ್ಗಕ್ಕೆ ಸಂಬಂಧಿಸಿದಂತೆ 2 ಪ್ರಕರಣಗಳು ಸೇರಿ ಒಟ್ಟು 24 ದೌರ್ಜನ್ ಪ್ರಕರಣಗಳು ದಾಖಲಾಗಿವೆ. 3 ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ 12.37 ಲಕ್ಷ ರೂ. ಪರಿಹಾರ ಧನ ನೀಡಲಾಗಿದೆ. 1 ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿ ಸಿದಂತೆ ರೂ.4,93,750 ಪರಿಹಾರ ಧನ ನೀಡಲಾಗಿದೆ. 20 ಜಾತಿ ನಿಂದನೆ, ಗುಂಪು ಘರ್ಷಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 9 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಮಾತನಾಡಿ, ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣ ತಡೆಗಟ್ಟುವುದರ ಜೊತೆಗೆ ಹೆಚ್ಚಿನ ಜಾಗೃತಿ ಮೂಡಿಸಲು ಸೂಚಿಸಿದರು. ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನಿನಲ್ಲಿರುವ ದಂಡನೆಗಳು ಮತ್ತು ಶಿಕ್ಷೆಯಪ್ರಮಾಣಕ್ಕೆ ಸಂಬಂಧಪಟ್ಟಂತೆ ಮಹಿಳೆಯರು, ಮಕ್ಕಳುಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಮತಾ ಪ್ರತಿಕ್ರಿಯಿಸಿ, 2020-21ನೇ ಸಾಲಿನಲ್ಲಿ ರೂ.14 ಲಕ್ಷ ಬಿಡುಗಡೆಯಾಗಿದ್ದು, ಈ ಅನುದಾನದಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸಲಾಗುವುದು ಎಂದರು. ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲೂ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಸಮಸ್ಯೆ ಇರುವ ಕಡೆ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸೋಣ ಎಂದು ಸಮಿತಿ ಸದಸ್ಯರು ಹೇಳಿದರು.
ನಾಮನಿರ್ದೇಶನ: ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಜಿ.ರೇಖಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜನಾಯ್ಕ ಅವರನ್ನುನಾಮನಿರ್ದೇಶನ ಮಾಡಿ ಸಭೆ ಅನುಮೋದಿಸಿತು.ಸಭೆಯಲ್ಲಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಪಂ ಸಿಇಒ ಟಿ.ಯೋಗೇಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿ ಕಾ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ರಾಜಪ್ಪ, ಅರುಣ್ ಕುಮಾರ್, ಕೃಷ್ಣಪ್ಪ, ಬೋರಯ್ಯ, ಸಿದ್ದಮ್ಮ, ಭಕ್ತ ಪ್ರಹ್ಲಾದ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.